ವಿಜಯಸಾಕ್ಷಿ ಸುದ್ದಿ, ಗದಗ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ 2024ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳು, ನಿರುದ್ಯೋಗಿಗಳು ಸೇವಾಸಿಂಧು ವೆಬ್ ಪೋರ್ಟಲ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಗದಗ ತಾಲೂಕಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಅಶೋಕ ಮಂದಾಲಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, 2023 ಮತ್ತು 2024ನೇ ಸಾಲಿನಲ್ಲಿ ಸ್ನಾತಕೋತ್ತರ ಪದವಿ, ಪದವಿ ಹಾಗೂ ಡಿಪ್ಲೋಮಾ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಕಳೆದ 6 ತಿಂಗಳುಗಳ ಕಾಲ ಸರಕಾರಿ, ಖಾಸಗಿ ಹಾಗೂ ಸ್ವಯಂ ಉದ್ಯೋಗ ಹೊಂದಿಲ್ಲದವರು ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಪಡೆಯಬಹುದಾಗಿದೆ.
ಪ್ರತಿ ತಿಂಗಳು ಯುವನಿಧಿ ಯೋಜನೆಯ ಪ್ರಯೋಜನ ಪಡೆಯಬೇಕಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಪ್ರತಿ ತಿಂಗಳು ತಾನು ನಿರುದ್ಯೋಗಿ ಎಂದು, ಉನ್ನತ ವ್ಯಾಸಂಗ ಮುಂದುವರೆಸುತ್ತಿಲ್ಲವೆAದು ಹಾಗೂ ಸ್ವಯಂ ಉದ್ಯೋಗಿ ಅಲ್ಲವೆಂದು ಪ್ರತಿ ತಿಂಗಳ 25ನೇ ತಾರೀಖಿನೊಳಗಾಗಿ ಸ್ವಯಂ ಘೋಷಣೆ ಮಾಡುವುದು ಕಡ್ಡಾಯವಾಗಿದೆ.
ಅಭ್ಯರ್ಥಿಗಳು ಕರ್ನಾಟಕ ಒನ್/ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯೋಜನೆಗೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ಡ್ ಮೊಬೈಲ್ ಸಂಖ್ಯೆ ಹೊಂದಿರಬೇಕು. ಅರ್ಜಿ ಸಲ್ಲಿಸಿದ ನಂತರ ಪೋರ್ಟಲ್‌ನಲ್ಲಿ ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಳ್ಳಬಹುದು.
ಒಂದು ವೇಳೆ ಅರ್ಜಿಯು ಅನುಮೋದನೆ ಆಗದಿದ್ದಲ್ಲಿ ಸಂಬಂಧಿಸಿದ ಇಲಾಖೆಯ ಕಚೇರಿಗಳಿಗೆ ತಮ್ಮ ಎಲ್ಲಾ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಅನುಮೋದನೆ ಮಾಡಿಸಿಕೊಳ್ಳಬೇಕು ಎಂದು ಗದಗ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಅಶೋಕ ಮಂದಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯೋಜನೆಯಡಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ಹಾಗೂ ಡಿಪ್ಲೋಮಾ ಉತ್ತೀರ್ಣರಾದವರಿಗೆ 1,500 ರೂ. ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ನೀಡಲಾಗುತ್ತದೆ. ಫಲಿತಾಂಶದ ನಂತರ ಹೆಸರನ್ನು ನೋಂದಾಯಿಸಿಕೊAಡ ಅಭ್ಯರ್ಥಿಗಳು ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿ, ನಂತರವೂ ನಿರುದ್ಯೋಗಿಗಳಾಗಿದ್ದಲ್ಲಿ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ.