ವಿಜಯಸಾಕ್ಷಿ ಸುದ್ದಿ, ಬೆಳಗಾವಿ-ಸುವರ್ಣಸೌಧ: ಜಿಲ್ಲಾ ಕಂಬಳ ಸಮಿತಿಯಿಂದ ಅನುಮೋದನೆಗೊಂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನसभೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಸಚಿವರು ಮಾತನಾಡಿದರು.
2025-26ನೇ ಸಾಲಿನಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯೋಜಿಸಲಾಗುವ ಕಂಬಳ ಉತ್ಸವಗಳಿಗೆ ಅನುದಾನ ಕೋರಿ ಪ್ರಸ್ತಾವನೆಗಳು ಸ್ವೀಕೃತವಾಗಿವೆ. ಇದಕ್ಕೆ ಸರ್ಕಾರದಿಂದ ಅನುಮೋದನೆ ನೀಡಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆಗೆ ಕಡತ ರವಾನಿಸಲಾಗಿದೆ. 2024-25ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ, ಮಂಗಳೂರು, ನರಿಂಗಾಣ, ಮೂಡಬಿದ್ರೆ, ಐಕಳ, ಜಪ್ಪು, ಪುತ್ತೂರು, ಬಂಟ್ವಾಳ, ಉಪ್ಪಿನಂಗಡಿ ಮತ್ತು ವೇಣೂರಿನಲ್ಲಿ ಆಯೋಜಿಸಿದ್ದ ಕಂಬಳೋತ್ಸವಗಳಿಗೆ ತಲಾ 5 ಲಕ್ಷ ರೂಗಳಂತೆ ಒಟ್ಟು 50 ಲಕ್ಷ ರೂ.ಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು.
ಸಚಿವರ ನಿರ್ಧಾರವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡದ ಶಾಸಕರುಗಳು ಒಕ್ಕೊರಲಿನಿಂದ ಅಭಿನಂದಿಸಿದರು.
5 ಕೋಟಿ ರೂ ವೆಚ್ಚದಲ್ಲಿ ಉಡುಪಿ ಜಿಲ್ಲೆಯ ಲೈಟ್‌ಹೌಸ್ ಬೀಚ್ ಅಭಿವೃದ್ಧಿಗೆ ಸರ್ಕಾರ ಮಂಜೂರಾತಿ ನೀಡಿದೆ. ಕಾಮಗಾರಿಯನ್ನು ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ನಿಗಮದಿಂದ ಅನುಷ್ಠಾನಗೊಳಿಸಲಾಗುವುದು ಎಂದು ಸಚಿವ ಹೆಚ್.ಕೆ. ಪಾಟೀಲ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದರು.
ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ಸರ್ಕಾರ ಇಂಬು ನೀಡುತ್ತಿದೆ. ಕಾಪು ವಿಧಾನಸಭಾ ಕ್ಷೇತ್ರ ಪಡುಬಿದ್ರಿ ನಡಿಘಟ್ಟ ಬೀಚ್ ರಸ್ತೆಯ ಎಂಡ್ ಪಾಯಿಂಟ್‌ನಲ್ಲಿ ಸಂಪರ್ಕ ಸೇತುವೆ ಹಾಗೂ ಕೂಡು ರಸ್ತೆ ನಿರ್ಮಾಣ ಕಾಮಗಾರಿಯನ್ನು 75 ಲಕ್ಷ ರೂ.ಗಳಲ್ಲಿ ಪೂರ್ಣಗೊಳಿಸಲಾಗಿದೆ. 2025-26ನೇ ಸಾಲಿಗೆ ಆಯವ್ಯಯದಲ್ಲಿ ಪ್ರವಾಸಿ ತಾಣಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ರೂ.86 ಕೋಟಿಗಳನ್ನು ಒದಗಿಸಲಾಗಿದೆ. ಇದರಲ್ಲಿ ಪ್ರವಾಸಿ ತಾಣಗಳ ಆದ್ಯತೆಗೆ ಅನುಗುಣವಾಗಿ ಪರಿಶೀಲಿಸಿ ರೂ.14 ಕೋಟಿ ವೆಚ್ಚದ ನೂತನ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪುರಾಣ ಪ್ರಸಿದ್ಧ ಬಿಳಿಗಿರಿ ರಂಗನಬೆಟ್ಟ ಕ್ಷೇತ್ರದಲ್ಲಿ ಸುಸಜ್ಜಿತ ಬಸ್ ನಿಲ್ದಾಣ, ವೀಕ್ಷಣಾ ಗೋಪುರಗಳು, ದಾಸೋಹ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ರೂ.5.75 ಕೋಟಿ ವೆಚ್ಚದಲ್ಲಿ ವಿವರವಾದ ಪರಿಕಲ್ಪನೆ ರೂಪಿಸಲಾಗಿದೆ. ಶೀಘ್ರದಲ್ಲಿ ಅನುದಾನ ಬಿಡುಗಡೆ ಮಾಡುವುದಾಗಿ ಸಚಿವ ಹೆಚ್.ಕೆ. ಪಾಟೀಲ ಕೊಳ್ಳೇಗಾಲದ ಶಾಸಕ ಕೃಷ್ಣಮೂರ್ತಿ ಎ.ಆರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಬಿಳಿಗಿರಿ ರಂಗನಬೆಟ್ಟ ದೇವಸ್ಥಾನದ ಪಾದುಕೆಯಿಂದ ರಾಜಗೋಪುರಕ್ಕೆ ಕಾಲಂಗಳೊAದಿಗೆ ಮೆಟ್ಟಿಲುಗಳ ವಿನ್ಯಾಸ ಮಾಡುವಲ್ಲಿ ದೊಡ್ಡ ಬಂಡೆಗಳು ಕಂಡುಬAದ ಕಾರಣ ಕಾಮಗಾರಿ ಮರುವಿನ್ಯಾಸವನ್ನು ಲೋಕೋಪಯೋಗಿ ಇಲಾಖೆಯಿಂದ ಸಿದ್ಧಪಡಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರೊಂದಿಗೆ ಚರ್ಚಿಸಿ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಸಚಿವ ಹೆಚ್.ಕೆ. ಪಾಟೀಲ ಭರವಸೆ ನೀಡಿದರು.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯಳಂದೂರು ತಾಲೂಕಿನ ಪುರಾಣ ಪ್ರಸಿದ್ಧ ಬಿಳಿಗಿರಿ ರಂಗನಬೆಟ್ಟ ಕ್ಷೇತ್ರವನ್ನು ಪ್ರವಾಸೋದ್ಯಮ ಸ್ಥಳವಾಗಿ ರೂಪುಗೊಳಿಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ನಿರಂತರವಾಗಿ ಬೆಟ್ಟಕ್ಕೆ ಆಗಮಿಸುತ್ತಾರೆ. ಇಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಶಾಸಕ ಕೃಷ್ಣಮೂರ್ತಿ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಸಚಿವ ಹೆಚ್.ಕೆ. ಪಾಟೀಲ, ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೆ ದೇವಾಲಯದ ಸುತ್ತ 1 ಕೋಟಿ ರೂ. ವೆಚ್ಚದಲ್ಲಿ ನೆಲಹಾಸು ಕಾಮಗಾರಿ ಪೂರ್ಣಗೊಳಿಸಲಾಗಿದೆ. ಉಳಿದ ಕಾಮಗಾರಿಗಳಿಗೆ ಅಗತ್ಯ ಅನುದಾನ ನೀಡುವ ಕಾರ್ಯ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ತಿಳಿಸಿದರು.



