ಹಾಸನ: ಪ್ರೀತಿಸುವಂತೆ ಯುವಕನೊಬ್ಬ ನಿರಂತರ ಕಿರುಕುಳ ನೀಡುತ್ತಿದ್ದ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡು ಬೆದರಿಕೆ ಹಾಕುತ್ತಿದ್ದ ಎಂಬ ಆರೋಪದ ನಡುವೆ 23 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳಗೋಡು ಗ್ರಾಮದಲ್ಲಿ ನಡೆದಿದೆ.
ಮೃತ ಯುವತಿಯನ್ನು ಭವಿತಾ ಹಾಗೂ ನಾಗೇಶ್ ದಂಪತಿಯ ಪುತ್ರಿ ಹಿಮಾ (23) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನೌಶಾದ್ ಎಂಬ ಯುವಕನ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹಿಮಾ ಮಂಗಳೂರಿನ ಕಾಲೇಜೊಂದರಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾಭ್ಯಾಸದಲ್ಲಿ ಮುಂದಿದ್ದ ಹಿಮಾ ಅವರ ಸಾವಿನಿಂದ ಕುಟುಂಬಸ್ಥರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಹಿಮಾ ಹಾಗೂ ನೌಶಾದ್ ಬಾಲ್ಯದಿಂದಲೂ ಪರಿಚಿತರಾಗಿದ್ದು, ಇಬ್ಬರೂ ಪ್ರಾಥಮಿಕ ಶಿಕ್ಷಣವನ್ನು ಒಟ್ಟಿಗೆ ಪಡೆದಿದ್ದರು ಎನ್ನಲಾಗಿದೆ. ಈ ಪರಿಚಯದ ಹಿನ್ನೆಲೆಯಲ್ಲಿ ನೌಶಾದ್ ಹಿಮಾ ಅವರನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.
ಕೆಲವು ಸಮಯದ ಹಿಂದೆ ಹಿಮಾ ಅವರು ನೌಶಾದ್ ಜೊತೆ ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ತೆಗೆದುಕೊಂಡಿದ್ದ ಫೋಟೋಗಳನ್ನು ನೌಶಾದ್ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದ ಎಂದು ಆರೋಪಿಸಲಾಗಿದೆ. ಫೋಟೋಗಳನ್ನು ತೆಗೆದುಹಾಕುವಂತೆ ಹಿಮಾ ಹಲವು ಬಾರಿ ಮನವಿ ಮಾಡಿದ್ದರೂ ನೌಶಾದ್ ಅದಕ್ಕೆ ಸ್ಪಂದಿಸಿರಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಇದಲ್ಲದೆ, ತಮ್ಮ ಬಳಿ ಇರುವ ಇನ್ನಷ್ಟು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ನೌಶಾದ್ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ಬೆಳವಣಿಗೆಗಳಿಂದ ಹಿಮಾ ತೀವ್ರ ಮನನೊಂದಿದ್ದರು ಎಂದು ಹೇಳಲಾಗಿದೆ. ಮನೆಯಲ್ಲಿದ್ದವರು ಹೊರಗೆ ತೆರಳಿದ್ದ ಸಂದರ್ಭದಲ್ಲಿ ಹಿಮಾ ವಿಷ ಸೇವಿಸಿದ್ದು, ಬಳಿಕ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ಒಬ್ಬಳೇ ಮಗಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹಿಮಾ ಅವರ ತಂದೆ ನಾಗೇಶ್ ಅವರು ಕೆಲ ದಿನಗಳ ಹಿಂದಷ್ಟೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರ ನಡುವೆಯೇ ಮಗಳ ಅಕಾಲಿಕ ಸಾವು ಕುಟುಂಬವನ್ನು ಮತ್ತಷ್ಟು ದುಃಖಕ್ಕೆ ದೂಡಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸಿಮೆಂಟ್ ಮಂಜು ಅವರು ಮೃತ ಯುವತಿಯ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ಸಂಬಂಧ ನೌಶಾದ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.









