ವಿಜಯಸಾಕ್ಷಿ ಸುದ್ದಿ, ಚಿಕ್ಕೋಡಿ
ಸದ್ಯ ಎಲ್ಲೆಡೆ ಕೊರೊನಾ ಹಾವಳಿ ಶುರುವಾಗಿದೆ. ಇನ್ನೂ ಮೂರನೇ ಅಲೆಗೆ ದೇಶ ಸಿದ್ಧವಾಗಬೇಕಿದೆ. ಆ ಸಂದರ್ಭದಲ್ಲಿ ಚಿಕ್ಕ ಮಕ್ಕಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಆವರಿಸಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದರಿಂದಾಗಿ ರಾಜ್ಯದ 30 ಜಿಲ್ಲೆಗಳಲ್ಲಿಯೂ ಮಕ್ಕಳಿಗೆ ಕೋವಿಡ್ ಕೇರ್ ಸೆಂಟರ್ ತೆರೆಯಲು ಸರ್ಕಾರ ನಿರ್ಧರಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳ ಕೊವಿಡ್ ಕೇರ್ ಸೆಂಟರ್ ನಿರ್ಮಾಣಕ್ಕಾಗಿ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ಚೆನ್ನಮ್ಮ ಶಾಲೆಗಳನ್ನು ಗುರುತಿಸಲಾಗಿದೆ. ವಿಶೇಷ ಮಕ್ಕಳ ಶಾಲೆಯಲ್ಲಿ ಕೂಡ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಮಂಡ್ಯ ಮತ್ತು ಚಾಮರಾಜನಗರದಲ್ಲಿ ತಂದೆ ಹಾಗೂ ತಾಯಿಯನ್ನು ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಈ ಇಬ್ಬರೂ ಮಕ್ಕಳ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ಏನು ಮಾಡಬೇಕು ಎಂದು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ. ಆ ಮಕ್ಕಳ ಪಾಲನೆ ಪೋಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದ ಎಲ್ಲ ಸೌಕರ್ಯ ಮಾಡಲಾಗುವುದು ಎಂದು ತಿಳಿಸಿದ್ದಾರೆ.