ಮಂಗಳೂರು: ಕರಾವಳಿ ಭಾಗದಲ್ಲಿ ಮಾದಕ ದ್ರವ್ಯ ಜಾಲ ಎಷ್ಟು ಆಳವಾಗಿ ವ್ಯಾಪಿಸಿದೆ ಎಂಬುದಕ್ಕೆ ಸಾಕ್ಷಿಯಾಗುವಂತೆ ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದುಬಾರಿ ಮಾದಕ ವಸ್ತುವಿನೊಂದಿಗೆ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಿವಾಸಿ ಸುಹಾನ (21) ಎಂದು ಗುರುತಿಸಲಾಗಿದೆ. ಈಕೆ ಕುಂದಾಪುರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವಿಡ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ಹಾಗೂ ಇತರ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ, ಸುಹಾನ ಚೆನ್ನೈನಿಂದ ಈ ಮಾದಕ ವಸ್ತುವನ್ನು ಮಂಗಳೂರಿಗೆ ಸಾಗಾಟ ಮಾಡಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ. ಕರಾವಳಿ ಭಾಗದ ಕಾಲೇಜು ವಿದ್ಯಾರ್ಥಿಗಳು ಮತ್ತು ಶ್ರೀಮಂತ ಗ್ರಾಹಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಸಂಪಾದಿಸುವ ಉದ್ದೇಶ ಹೊಂದಿದ್ದಳು ಎನ್ನಲಾಗಿದೆ.
ಇನ್ನೂ ಆತಂಕಕಾರಿ ಸಂಗತಿ ಎಂದರೆ, ಕೇವಲ 21 ವರ್ಷದ ಈ ವಿದ್ಯಾರ್ಥಿನಿ ಈಗಾಗಲೇ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಹಿಂದೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು,
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಯಲ್ಲೂ ಈಕೆಯ ವಿರುದ್ಧ ಮಾದಕ ದ್ರವ್ಯ ಸಾಗಾಟ ಸಂಬಂಧ ಪ್ರಕರಣ ದಾಖಲಾಗಿರುವುದು ಪತ್ತೆಯಾಗಿದೆ. ಪ್ರಸ್ತುತ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಜಾಲದ ಹಿಂದೆ ಇರುವ ಪ್ರಮುಖ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.



