ಶಿವಮೊಗ್ಗ: ಜಮೀನು ಖಾತೆ ಬದಲಾವಣೆಗಾಗಿ 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು, ಅದರಲ್ಲೂ 1 ಲಕ್ಷ ರೂಪಾಯಿ ಮುಂಗಡ ಹಣ ಸ್ವೀಕರಿಸುವ ವೇಳೆ ಚಿಕ್ಕಜಂಬೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬಂಧಿತ ಆರೋಪಿಯನ್ನು ವಿಠಲ ಎಂದು ಗುರುತಿಸಲಾಗಿದೆ. ಶಿಕಾರಿಪುರ ಪಟ್ಟಣದ ಸರ್ಕಾರಿ ನೌಕರರ ಕ್ಯಾಂಟೀನ್‌ನಲ್ಲಿ 1 ಲಕ್ಷ ರೂಪಾಯಿ ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಜಂಬೂರು ಗ್ರಾಮದ ಜಿಕ್ರಿಯಾ ಬೇಗ್ ಅವರು ತಮ್ಮ ತಂದೆಯ ವಿಲ್ಪತ್ರದ ಆಧಾರದ ಮೇಲೆ ಜಮೀನಿನ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಖಾತೆ ಬದಲಾವಣೆ ಮಾಡಿಕೊಡಲು ಗ್ರಾಮ ಲೆಕ್ಕಾಧಿಕಾರಿ ವಿಠಲ ಅವರು 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಇದರಲ್ಲಿ 1 ಲಕ್ಷ ರೂಪಾಯಿ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ, ಇನ್ಸ್ಪೆಕ್ಟರ್ ಮೈಲಾರ ಹಾಗೂ ಸಿಬ್ಬಂದಿಯವರಿಂದ ಯಶಸ್ವಿಯಾಗಿ ನಡೆಸಲಾಯಿತು.



