ನವದೆಹಲಿ:- ಮುಸ್ಲಿಮರಿಗೆ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡುವ ಮೂಲಕ ರಾಜ್ಯ ಸರ್ಕಾರ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಬೊಮ್ಮಾಯಿ, ಮುಸ್ಲಿಮರಿಗೆ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡುವ ಮೂಲಕ ಈ ಸರ್ಕಾರ ಸಂವಿಧಾನ ವಿರೋಧಿ ಕೆಲಸಗಳನ್ನು ಮಾಡುತ್ತಿದೆ. ಸಂವಿಧಾನ ವಿರೋಧಿ ಸರ್ಕಾರ ಕರ್ನಾಟಕದಲ್ಲಿದ್ದು, ಈ ಸರ್ಕಾರ ಆಡಳಿತ ನಡೆಸಲು ಯಾವುದೇ ನೈತಿಕ ಹಕ್ಕಿಲ್ಲ. ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು ಎಂದರು.
ಈಗಾಗಲೇ ಆಂಧ್ರಪ್ರದೇಶ ಹಾಗೂ ಪಶ್ಚಿಮ ಬಂಗಾಳ ಪ್ರಕರಣಗಳಲ್ಲಿ ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್ ಬಹಳ ಸ್ಪಷ್ಟವಾಗಿ ಹೇಳಿದೆ. ಆದರೂ, ಇವರು ಧರ್ಮದ ಆಧಾರದಲ್ಲಿ ಮೀಸಲಾತಿ ತರುತ್ತಿದ್ದಾರೆ. ಅದೂ ಕೂಡ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.
ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸಂವಿಧಾನದಲ್ಲಿ ಯಾವುದೇ ಅವಕಾಶ ಇಲ್ಲ. ಟೆಂಡರ್‌ನಲ್ಲಿ ಪಾರದರ್ಶಕತೆ ಕಾಯ್ದೆಯನ್ನೇ ರದ್ದು ಪಡಿಸುವುದು ಒಳ್ಳೆಯದು. ಸುಮಾರು ಶೇ.30 ರಿಂದ 40ರಷ್ಟು ಮೀಸಲಾತಿ ನೀಡಿದರೆ ಪಾರದರ್ಶಕತೆಗೆ ಎಲ್ಲಿ ಗೌರವ ಇರುತ್ತದೆ ಎಂದು ಪ್ರಶ್ನಿಸಿದರು.
ಅಲ್ಲದೇ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಯಾವಾಗಲೂ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಾರೆ. ಆದರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಈ ಬಗ್ಗೆ ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ಮುಸಲ್ಮಾನರಿಗೆ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದು ಡಿಕೆಶಿ ಅವರೇ ಒಪ್ಪಿಕೊಂಡಿದ್ದಾರೆ. ಸಂವಿಧಾನ ತಿದ್ದುಪಡಿ ತರುತ್ತೇವೆ ಎಂದು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು.