ನವದೆಹಲಿ: ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ಬೋರ್‌ವೆಲ್‌ಗೆ ಬಿದ್ದಿದ್ದ 4 ವರ್ಷದ ಬಾಲಕನನ್ನು ದೀರ್ಘ ಕಾರ್ಯಾಚರಣೆಯ ಬಳಿಕ ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಚಕ್ ಸಮಾನಾ ಗ್ರಾಮದ ಭಿಖೋವಾಲ್ ಪ್ರದೇಶದಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು.
ಗುರ್ಕರನ್ ಸಿಂಗ್ ಎಂಬ ಬಾಲಕ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದ ವೇಳೆ ಹೊಸದಾಗಿ ಕೊರೆದ ಬೋರ್‌ವೆಲ್‌ಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ. ಬಾಲಕ ಸುಮಾರು 30 ಅಡಿ ಆಳದಲ್ಲಿ ಸಿಲುಕಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಹಾಗೂ ಸ್ಥಳೀಯ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿವೆ. ಸುಮಾರು 9 ಗಂಟೆಗಳ ನಿರಂತರ ಕಾರ್ಯಾಚರಣೆಯ ನಂತರ ಮಧ್ಯರಾತ್ರಿ ಬಾಲಕನನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಿಸಲಾಗಿದೆ.
ರಕ್ಷಣೆಯ ನಂತರ ಮಗುವನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಪ್ರಕಾರ ಬಾಲಕನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.



