ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಮುಖ ಕಾಮಗಾರಿ ನಡೆಸುವ ಇಲಾಖೆಗಳಲ್ಲಿ 40 ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಸಂಬಂಧ ಪ್ರಕರಣದ ತನಿಖೆಯನ್ನು ಎಸ್ ಐಟಿಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಎಸ್ ಐಟಿಯಿಂದ ತನಿಖೆ ನಡೆಸಿ 2 ತಿಂಗಳಲ್ಲಿ ವರದಿ ಪಡೆಯಲು ತೀರ್ಮಾನಿಸಲಾಗಿದೆ.
ಸಂಪುಟ ಸಭೆ ಬಳಕ ವಿವರ ನೀಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ಇಂದು 21 ವಿಷಯಗಳನ್ನ ಚರ್ಚಿಸಿ ಹಲವು ನಿರ್ಣಯ ತೆಗೆದುಕೊಂಡಿದ್ದೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರು ಮಾಡಿರೋ 40% ಕಮೀಷನ್ ಆರೋಪ ಬಗ್ಗೆ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖಾ ಆಯೋಗ ರಚನೆ ಮಾಡಲಾಗಿತ್ತು. ನಾಗಮೋಹನ್ ದಾಸ್ ಅವರು ಸಲ್ಲಿಸಿದ ವರದಿಯನ್ನು ಸಂಪುಟ ಸಭೆಗೆ ಸಲ್ಲಿಸಲಾಯ್ತು ಎಂದು ತಿಳಿಸಿದರು.
ದೂರುಗಳ ಮಾಹಿತಿ ಕಲೆ ಹಾಕಿ ವರದಿಯನ್ನು ನೀಡಲಾಗಿದೆ. 3 ಲಕ್ಷ ಕಾಮಗಾರಿಗಳ ಪೈಕಿ 1729 ಕಾಮಗಾರಿಗಳ ಬಗ್ಗೆ ಆಪಾದನೆಗಳಿವೆ. ಯೋಜನೆ, ಹಣ ಬಿಡುಗಡೆ, ಎಲ್ಒಸಿ ಬಿಡುಗಡೆ ಸರಿಯಾದ ರೀತಿಯಲ್ಲಿ ಇಲ್ಲ. ಯಾವ ಪ್ರಮಾಣದಲ್ಲಿ ವ್ಯತ್ಯಾಸಗಳಾಗಿವೆ ಎಂಬುದನ್ನು ಚರ್ಚೆ ನಡೆಸಿದ್ದೇವೆ. ಅನುದಾನಕ್ಕಿಂತ ಹೆಚ್ಚು ಬಿಲ್ ಆಗಿದೆ,
ಕಾಮಗಾರಿಗಳ ಬಗ್ಗೆ ಸಂಶಯಗಳಿವೆ. ಕೆಲವು ಕಡೆ ಟೆಂಡರ್ ಹಂಚಿಕೆ ವೇಳೆಯೇ ಮಧ್ಯವರ್ತಿಗಳ ಕೆಲಸ ಆಗಿದೆ. ಗಂಭೀರವಾದ ವರದಿಯಾದ ಹಿನ್ನೆಲೆಯಲ್ಲಿ ಎಸ್ಐಟಿ ರಚನೆ ಮಾಡಲು ತೀರ್ಮಾನಿಸಿದ್ದೇವೆ. ಎರಡು ತಿಂಗಳಲ್ಲಿ ಕ್ರಮ ಕೈಗೊಳ್ಳಲು ಎಸ್ಐಟಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.