ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಸುಮಾರು 56 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಚಿವ ಬೋಸರಾಜು ತಿಳಿಸಿದ್ದಾರೆ.
ವಿಧಾನಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಈ ಕುರಿತು ಪ್ರಶ್ನೆ ಕೇಳಿದರು. ರಾಜ್ಯದಲ್ಲಿ ಸುಮಾರು 2.84 ಲಕ್ಷ ಹುದ್ದೆಗಳು ಖಾಲಿ ಇದ್ದರೂ ಸರ್ಕಾರ ಅವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಂಡಿಲ್ಲ. ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲಾಗುತ್ತಿದೆ. ಒಳಮೀಸಲಾತಿ ಹಾಗೂ ಕೋರ್ಟ್ ವಿಚಾರಗಳನ್ನು ನೆಪವನ್ನಾಗಿ ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ವಿಳಂಬಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.
ಇದಕ್ಕೆ ಮುಖ್ಯಮಂತ್ರಿ ಪರವಾಗಿ ಉತ್ತರಿಸಿದ ಸಚಿವ ಬೋಸರಾಜು, ಒಟ್ಟು 56,432 ಹುದ್ದೆಗಳ ನೇಮಕಾತಿಗೆ ಸರ್ಕಾರ ಈಗಾಗಲೇ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿಯೇ ನಿರ್ಧಾರವಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದರು.
371ಜೆ ನಿಯಮದ ಪ್ರಕಾರವೂ ನೇಮಕಾತಿ ನಡೆಯಲಿದೆ. ಈ ಕುರಿತು ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆಗೆ ಸೂಚನೆ ನೀಡಲಾಗಿದೆ. ಅಗತ್ಯವಿದ್ದರೆ ಈ ತಿಂಗಳಲ್ಲೇ ಸಚಿವ ಸಂಪುಟ ಉಪಸಮಿತಿ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.



