ಮಥುರಾ : ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಅತಿವೇಗ ಮತ್ತು ನಿಯಮ ಉಲ್ಲಂಘನೆಯಿಂದ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶನಿವಾರ ಬೆಳಗಿನ ಜಾವ 2:45ರ ಸುಮಾರಿಗೆ ನಡೆದ ಈ ದುರಂತದಲ್ಲಿ ಆರು ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಸುರಿರ್ ಪೊಲೀಸ್ ಠಾಣೆ ವ್ಯಾಪ್ತಿಯ ಮೈಲ್‌ಸ್ಟೋನ್ 88 ಬಳಿ ಈ ಅಪಘಾತ ಸಂಭವಿಸಿದ್ದು, ದೆಹಲಿಯಿಂದ ಕಾನ್ಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪ್ರಯಾಣದ ಮಧ್ಯೆ ಪ್ರಯಾಣಿಕರಿಗೆ ಶೌಚಾಲಯ ಸೌಲಭ್ಯಕ್ಕಾಗಿ ನಿಲ್ಲಿಸಲಾಗಿತ್ತು. ಆದರೆ ಚಾಲಕ ಹಸಿರು ವಲಯದಲ್ಲಿ ಬಸ್ ನಿಲ್ಲಿಸುವ ಬದಲು ನಿಯಮ ಉಲ್ಲಂಘಿಸಿ ರಸ್ತೆ ಮೇಲೆಯೇ ನಿಲ್ಲಿಸಿದ್ದಾನೆ ಎನ್ನಲಾಗಿದೆ.
ಈ ವೇಳೆ ಹಿಂದಿನಿಂದ ಅತಿವೇಗದಲ್ಲಿ ಬಂದ ಕಂಟೇನರ್ ಬಸ್‌ಗೆ ಡಿಕ್ಕಿ ಹೊಡೆದು, ಬಸ್ ಕೆಳಗೆ ನಿಂತಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಡಿಕ್ಕಿಯ ತೀವ್ರತೆಗೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿವೆ. ಮೃತರಲ್ಲಿ ಬಸ್ತಿ ನಿವಾಸಿ ದೇವೇಶ್, ಔರೈಯಾದ ಸೋನು, ಕನ್ನೌಜ್ನ ಅಸ್ಲಾಂ ಮತ್ತು ದೆಹಲಿಯ ಸಂತೋಷ್ ಎಂದು ನಾಲ್ವರನ್ನು ಗುರುತಿಸಲಾಗಿದೆ. ಉಳಿದ ಇಬ್ಬರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಹೈವೇಯಲ್ಲೇ ಬಸ್ ನಿಲ್ಲಿಸಿರುವುದು ಹಾಗೂ ಕಂಟೇನರ್‌ನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಪ್ರಮುಖ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ.



