ದಾವಣಗೆರೆ: ಜೇನು ಸಂಗ್ರಹಿಸಲು ಮಾವನೊಂದಿಗೆ ತೆರಳಿದ್ದ 7 ವರ್ಷದ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತನ ಮೃತದೇಹ ಹಳ್ಳದಲ್ಲಿ ಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ಗ್ರಾಮದ ಶಶಿನಾಯ್ಕ್ ಅವರ ಪುತ್ರ ಆದಿತ್ಯ (7) ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಆದಿತ್ಯ ತನ್ನ ಮಾವ ತಾವರೆನಾಯ್ಕ್ ಅವರೊಂದಿಗೆ ಜೇನು ತರಲು ತೆರಳಿದ್ದನು. ಆದರೆ ಸಂಜೆ ವೇಳೆಯಾದರೂ ಇಬ್ಬರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡು ಜಗಳೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಗುರುವಾರ ಬೆಳಗ್ಗೆ ಗ್ರಾಮದ ಸಮೀಪದ ಹಳ್ಳದಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಬಾಲಕನ ಸಾವಿನ ಹಿಂದೆ ದುಷ್ಕೃತ್ಯವಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಘಟನೆಯ ಬಳಿಕ ಮಾವ ತಾವರೆನಾಯ್ಕ್ ನಾಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಅನುಮಾನ ಮೂಡಿಸಿದೆ. ಬಾಲಕನನ್ನು ಕೊಲೆ ಮಾಡಿ ಮೃತದೇಹವನ್ನು ಹಳ್ಳದಲ್ಲಿ ಎಸೆದು ಪರಾರಿಯಾಗಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.
ಸದ್ಯ ಬಾಲಕನ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಸಾವಿನ ಕಾರಣ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ತಾವರೆನಾಯ್ಕ್ ಪತ್ತೆಗಾಗಿ ಪೊಲೀಸರು ವ್ಯಾಪಕ ಹುಡುಕಾಟ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.



