ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಡಿಸೆಂಬರ್ 2ರಿಂದ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದೆ. ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಬರೋಬ್ಬರಿ 7,000 ಪೊಲೀಸ್ ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗುತ್ತಿದೆ. ಕರ್ತವ್ಯಕ್ಕೆ ಆಗಮಿಸುವ ಪೊಲೀಸರಿಗೆ ವಾಸ್ತವ್ಯದ ತೊಂದರೆಯಾಗದಂತೆ ಸುವರ್ಣ ವಿಧಾನಸೌಧದ ಸಮೀಪದಲ್ಲೇ ಬೃಹತ್ ಪೊಲೀಸ್ ಟೌನ್ಶಿಪ್ ನಿರ್ಮಿಸಲಾಗಿದೆ.
ಈ ಪೊಲೀಸ್ ಟೌನ್ಶಿಪ್ನಲ್ಲಿ ಒಂದೇ ಸೂರಿನಡಿ ಸುಮಾರು 2,500 ಸಿಬ್ಬಂದಿಗೆ ವಾಸ್ತವ್ಯದ ವ್ಯವಸ್ಥೆ ಕಲ್ಪಿಸಲಾಗಿದೆ. ಇದಕ್ಕಾಗಿ ಬೃಹತ್ ಜರ್ಮನ್ ಟೆಂಟ್ಗಳನ್ನು ನಿರ್ಮಿಸಲಾಗಿದ್ದು, ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೂ ಪ್ರತ್ಯೇಕ ಕಾಟ್, ಬೆಡ್ ಹಾಗೂ ಬೆಡ್ಶೀಟ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಬಿಸಿ ನೀರಿನ ಸೌಲಭ್ಯ ಮತ್ತು ಗುಣಮಟ್ಟದ ಊಟದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.
ಪೊಲೀಸರ ಒತ್ತಡ ನಿವಾರಣೆಗೆ ಮನರಂಜನಾ ವ್ಯವಸ್ಥೆ:
ದಿನವಿಡೀ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಯ ವಿಶ್ರಾಂತಿ ಹಾಗೂ ಒತ್ತಡ ನಿವಾರಣೆಗೆ ಟೌನ್ಶಿಪ್ನಲ್ಲಿ ವಿಶೇಷ ಮನರಂಜನಾ ವೇದಿಕೆಯನ್ನು ನಿರ್ಮಿಸಲಾಗಿದೆ. ತುರ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ವೈದ್ಯಕೀಯ ತಂಡವನ್ನೂ ನಿಯೋಜಿಸಲಾಗಿದೆ. ಇದರ ಜೊತೆಗೆ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಅಗ್ನಿಶಾಮಕ ದಳದ ತಂಡವನ್ನೂ ಸ್ಥಳದಲ್ಲೇ ನಿಯೋಜಿಸಲಾಗಿದೆ.
ಪೊಲೀಸ್ ಟೌನ್ಶಿಪ್ ಪರಿಶೀಲಿಸಿದ ನಗರ ಪೊಲೀಸ್ ಆಯುಕ್ತರು:
ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಟೌನ್ಶಿಪ್ಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಸಿಬ್ಬಂದಿಯ ವಾಸ್ತವ್ಯ, ಊಟ ಹಾಗೂ ಇತರ ಮೂಲಸೌಕರ್ಯಗಳ ವ್ಯವಸ್ಥೆಯನ್ನು ಖುದ್ದಾಗಿ ವೀಕ್ಷಿಸಿದ್ದಾರೆ. ಕರ್ತವ್ಯಕ್ಕೆ ಆಗಮಿಸುವ ಸಿಬ್ಬಂದಿಗೆ ಯಾವುದೇ ರೀತಿಯ ಕೊರತೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದಾದ್ಯಂತ ಖಾಕಿ ಪಡೆ ಹದ್ದಿನ ಕಣ್ಣು:
ಇನ್ನು ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದ ಒಳಗೆ ಮತ್ತು ಹೊರಗೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರತಿಭಟನಾ ಸ್ಥಳಗಳು ಸೇರಿದಂತೆ ನಗರದ ಪ್ರಮುಖ ಹಾಗೂ ಆಯಕಟ್ಟಿನ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಒಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಳಗಾವಿ ನಗರದಲ್ಲಿ ಖಾಕಿ ಪಡೆ ಹದ್ದಿನ ಕಣ್ಣಿಟ್ಟಿದ್ದು, ಅಧಿವೇಶನ ಸುಗಮವಾಗಿ ನಡೆಯಲು ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.









