ಬಳ್ಳಾರಿಯಲ್ಲಿ 88ನೇ ಸಾಹಿತ್ಯ ಸಮ್ಮೇಳನ

0
Spread the love

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಬಳ್ಳಾರಿಯಲ್ಲಿ ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ನಿರ್ದರಿಸಲಾಗಿದೆ ಎಂದು ಅಖಂಡ ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ ತಿಳಿಸಿದರು.

Advertisement

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬಳ್ಳಾರಿ, ಕೋಲಾರ, ಯಾದಗಿರಿ,  ಚಿಕ್ಕಮಗಳೂರು, ದೆಹಲಿಯಲ್ಲಿ ಸಮ್ಮೇಳನ ನಡೆಸುವ ಕುರಿತು ಚರ್ಚೆಗಳು ಸಾಗಿದ್ದವು. ಅದರೆ ಅಂತಿಮವಾಗಿ ಮುಂದಿನ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಸಲು ಅವಿರೋಧವಾಗಿ ತೀರ್ಮಾನಿಸಿರುವುದು ಸಂತಸ ತಂದಿದೆ ಎಂದರು.

1926 ಹಾಗೂ 1938ರಲ್ಲಿ ಬಳ್ಳಾರಿಯಲ್ಲಿ ಸಮ್ಮೇಳನ ನಡೆದಿತ್ತು. ಸ್ವಾತಂತ್ರ್ಯ ನಂತರ 1958ರಲ್ಲಿ ವಿ.ಕೃ. ಗೋಕಾಕ ಅವರ ಅಧ್ಯಕ್ಷತೆಯಲ್ಲಿ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸಮ್ಮೇಳನ ಅರ್ಥಪೂರ್ಣವಾಗಿ ನಡೆದಿತ್ತು. ಸುದೀರ್ಘ 66 ವರ್ಷಗಳ ಬಳಿಕ ಬಳ್ಳಾರಿಗೆ ಸಾಹಿತ್ಯ ಸಮ್ಮೇಳನದ ಅವಕಾಶ ದಕ್ಕಿದ್ದು, ಸಮ್ಮೇಳನ ನಡೆಸಲು ಅವಕಾಶ ಮಾಡಿಕೊಟ್ಟ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಮತ್ತು ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಅಭಿನಂದನೆಗಳನ್ನು ತಿಳಿಸಿದರು.

ಕಸಾಪ ತಾಲೂಕು ಅಧ್ಯಕ್ಷ ಕೆ.ಉಚ್ಚೆಂಗೆಪ್ಪ ಮಾತನಾಡಿ, ಗಡಿನಾಡಿನಲ್ಲಿ ಕನ್ನಡವನ್ನು ಜಾಗೃತವಾಗಿ ಇರಿಸುವ ನಿಟ್ಟಿನಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರವುದು ಸೂಕ್ತವಾಗಿದೆ. ೮೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಜರುಗಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹರಿಹರ ತಾಲೂಕು ಕಸಾಪ ಅಧ್ಯಕ್ಷ ಮಂಜುನಾಥಯ್ಯ, ಹರಪನಹಳ್ಳಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಎಚ್.ಮಲ್ಲಿಕಾರ್ಜುನ, ಚಿಗಟೇರಿ ಕಸಾಪ ಹೋಬಳಿ ಘಟಕದ ಅಧ್ಯಕ್ಷ ಸಿ.ರಾಮನಗೌಡ, ತೆಲಿಗಿ ಕಸಾಪ ಹೋಬಳಿ ಘಟಕದ ಅಧ್ಯಕ್ಷ. ಕೆ.ಎಸ್. ವೀರಭದ್ರಪ್ಪ, ಅರಸೀಕೆರೆ ಕಸಾಪ ಹೋಬಳಿ ಘಟಕದ ಅಧ್ಯಕ್ಷ ಎಂ.ಸುರೇಶ ಮುಂತಾದವರಿದ್ದರು.


Spread the love

LEAVE A REPLY

Please enter your comment!
Please enter your name here