ವಿಜಯಸಾಕ್ಷಿ ಸುದ್ದಿ, ಗದಗ : ಏಪ್ರಿಲ್ 19ರಂದು ಹಾವೇರಿ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಅಂದು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಸಾವಿರಾರು ಜನರು ಬರುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗದುಗಿನಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ಎಂಟು ಕ್ಷೇತ್ರದ ಜನರು ಕಾರ್ಯಕರ್ತರಿಗೆ ಬರಲು ಸೂಚನೆ ನೀಡಿದ್ದೇವೆ. ಸಾವಿರಾರು ಜನರು ಬರುತ್ತಾರೆ. ಅಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್, ಮಾಜಿ ಸಚಿವರಾರ ಬೈರತಿ ಬಸವರಾಜ, ಮುರುಗೇಶ್ ನಿರಾಣಿ ಆಗಮಿಸಲಿದ್ದಾರೆ ಎಂದರು.
ಸಂಸದ ಕರಡಿ ಸಂಗಣ್ಣ ಬಿಜೆಪಿ ತೊರೆದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಂಗಣ್ಣ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಿರುವುದು ದುರಾದೃಷ್ಟಕರ. ನಾವು ಅವರ ಮನವೊಲಿಸುವ ಕೆಲಸ ಮಾಡಿದ್ದರೂ, ಕಾಂಗ್ರೆಸ್‌ನವರು ಅವರಿಗೆ ಪ್ರಚೋದನೆ ನೀಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಸಿಗದವರು ಬೇಸರ ಮಾಡಿಕೊಳ್ಳುವುದು ಸಹಜ. ಇದು ರಾಷ್ಟ್ರೀಯ ಚುನಾವಣೆ ಆಗಿರುವುದರಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್‌ನಿಂದಲೂ ಅನೇಕ ನಾಯಕರು ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಾರೆ. ಬೆಳ್ಳಟ್ಟಿ ಗ್ರಾಮದಲ್ಲಿ ನೂರಾರು ಜನರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಸ್ಥಳೀಯವಾಗಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇದ್ದರೂ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.