ವಿಜಯಸಾಕ್ಷಿ ಸುದ್ದಿ, ಗದಗ : ಮುಂಗಾರು ಆರಂಭ ಆಗುವವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಹಾಗೂ ಮುಂಗಾರು ಪೂರ್ವ ಹಂಗಾಮಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸೋಮವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಮತ್ತು ಪಟ್ಟಣ ಪ್ರದೇಶ ಸೇರಿದಂತೆ ಯಾವ ಕಡೆಯೂ ಸಹ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಗದಗ, ರೋಣ, ಗಜೇಂದ್ರಗಡ, ಮುಂಡರಗಿ, ಶಿರಹಟ್ಟಿ, ನರಗುಂದ, ಲಕ್ಷ್ಮೇಶ್ವರ ತಾಲೂಕು ಕೇಂದ್ರಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ನಿರ್ವಹಿಸಬೇಕು.
ಜಾನುವಾರುಗಳಿಗೆ ಮೇವನ್ನು ಸರಿಯಾಗಿ ಪೂರೈಸಬೇಕು. ಮೇವು ಕೊರತೆಯಾಗದಂತೆ ದಾಸ್ತಾನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಇಒಗಳು ಹಾಗೂ ಸಂಬಂಧಪಟ್ಟ ಇಂಜಿನಿಯರ್‌ಗಳು, ಮೇ 15ರವರೆಗೆ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿ ಸಮಸ್ಯೆ ಉಂಟಾಗದಂತೆ ಗಮನ ಹರಿಸಲಾಗುವುದು ಎಂದು ಮಾಹಿತಿ ನೀಡಿದರು.
ಜಿ.ಪಂ ಸಿಇಓ ಎಸ್.ಭರತ್ ಮಾತನಾಡಿ, ಕುಡಿಯುವ ನೀರು ಪೂರೈಕೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಯಾವುದೇ ರೀತಿ ಲೋಪ ಉಂಟಾಗದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರು ಪೂರೈಕೆಗೆ ಪ್ರಥಮ ಆದ್ಯತೆ ನೀಡಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ, ಉಪ ವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ಜಿ.ಪಂ ಉಪ ಕಾರ್ಯದರ್ಶಿ ಸಿ.ಬಿ. ದೇವರಮನಿ, ತಹಸೀಲ್ದಾರ ಶ್ರೀನಿವಾಸ ಕುಲಕರ್ಣಿ, ತಾ.ಪಂ ಇ.ಒಗಳು, ನೋಡಲ್ ಅಧಿಕಾರಿಗಳು ಇತರರಿದ್ದರು.


