ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸಿ : ಎಬಿವಿಪಿ ಆಕ್ರೋಶ

0
protest
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಹುಬ್ಬಳ್ಳಿಯಲ್ಲಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ನಗರದ ಜನರಲ್ ಕಾರ್ಯಪ್ಪ ಸರ್ಕಲ್ (ಹಳೇ ಜಿಲ್ಲಾಧಿಕಾರಿ ಕಚೇರಿ ವೃತ್ತ)ದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ನಂತರ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಪ್ರತಿಭಟನಾ ಸ್ಥಳದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಹಾಗೂ ಆರೋಪಿ ಫಯಾಜ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು, ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಬೇಕು ಎಂದು ಪಟ್ಟು ಹಿಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ವಿದ್ಯಾರ್ಥಿಗಳ ಮನವೊಲಿಸಲು ಎಷ್ಟೇ ಪ್ರಯತ್ನಿಸಿದರೂ ಜಿಲ್ಲಾಧಿಕಾರಿಗಳು ಆಗಮಿಸಲೇಬೇಕು ಎಂದು ಪ್ರತಿಭಟನೆ ಮುಂದುವರಿಸಿದರು.

ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠರನ್ನು ಹಾಡುಹಗಲೇ ಕಾಲೇಜ್ ಕ್ಯಾಂಪಸ್‌ನಲ್ಲಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕೊಲೆ, ದರೋಡೆ, ಹಲ್ಲೆಗಳಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕಣ್ಮುಚ್ಚಿ ಕುಳಿತಿದೆ. ಹತ್ಯೆಯ ಪ್ರಕರಣಗಳಲ್ಲಿ ವೈಯಕ್ತಿಕ ಕಾರಣ ಎಂಬ ಹೇಳಿಕೆ ನೀಡುವ ಮೂಲಕ ಹಲ್ಲೆಕೋರರಿಗೆ ಬಹಿರಂಗವಾಗಿ ಪ್ರಚೋದನೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಹುಬ್ಬಳ್ಳಿ ನಗರದ ಕಾಲೇಜ್ ಕ್ಯಾಂಪಸ್‌ನಲ್ಲಿ ಹಾಡುಹಗಲೇ ವಿದ್ಯಾರ್ಥಿನಿ ನೇಹಾಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತನಿಖೆ ಕೈಗೊಂಡು ತಪ್ಪಿತಸ್ಥನಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳುವ ಬದಲು ತನಿಖೆಗೂ ಮುನ್ನವೇ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಗೃಹಮಂತ್ರಿಗಳು ವ್ಯಕ್ತಿಗತ ಕಾರಣಗಳಿಂದ ಈ ಕೃತ್ಯ ಜರುಗಿದೆ ಎಂದು ನೀಡಿರುವ ಹೇಳಿಕೆಗಳು ಖಂಡನೀಯ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರಡಗಿ ಮಾತನಾಡಿ, ಕಳೆದ 8-10 ದಿನಗಳಲ್ಲಿ ರಾಜ್ಯದ ವಿವಿಧ ಕಡೆಗಳಲ್ಲಿ 8ಕ್ಕೂ ಹೆಚ್ಚು ಸರಣಿ ಹತ್ಯೆಗಳು ನಡೆದಿದ್ದು, ರಾಜ್ಯದ ಜನರಲ್ಲಿ ಆತಂಕ ಹೆಚ್ಚಿಸಿದೆ. ಇದರಿಂದಾಗಿ ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿರುವದು ಮೇಲ್ನೊಟಕ್ಕೆ ಕಂಡುಬರುತ್ತದೆ ಎಂದರು.

ಪ್ರತಿಭಟನೆಯ ಸಂದರ್ಭದಲ್ಲಿ ಮುಖಂಡರಾದ ಅನಿಲ ಮೆಣಸಿನಕಾಯಿ, ಬಸವರಾಜ ಇಟಗಿ, ಎಂ.ಎಂ. ಹಿರೇಮಠ, ರಾಜು ಕುಲಕರ್ಣಿ, ಎಂ.ಎಸ್. ಕರಿಗೌಡರ, ಜಗನ್ನಾಥಸಾ ಭಾಂಡಗೆ, ಸುರೇಶ ಚಿತ್ತರಗಿ, ಭದ್ರೇಶ ಕುಸ್ಲಾಪೂರ, ಬಾಬು ಸುಂಕದ, ದ್ಯಾಮಣ್ಣ ನೀಲಗುಂದ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಇದ್ದರು.

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಕ್ರಮ ಕೈಗೊಳ್ಳುವುದು ಹಾಗು ನ್ಯಾಯಪರ ತನಿಖೆಯನ್ನು ಚುರುಕುಗೊಳಿಸಿ ತಪ್ಪಿತಸ್ಥ ವ್ಯಕ್ತಿಯನ್ನು ಶಿಕ್ಷಿಸುವ ಕುರಿತು ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರಿಗೆ ಮನವಿ ಸಲ್ಲಿಸಲಾಯಿತು.


Spread the love

LEAVE A REPLY

Please enter your comment!
Please enter your name here