ವಿಜಯಸಾಕ್ಷಿ ಸುದ್ದಿ,ಲಕ್ಷ್ಮೇಶ್ವರ : ಅರ್ಹ ಮತದಾರರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಸಂಕಲ್ಪ ಮಾಡಿ, ಪ್ರಜಾಪ್ರಭುತ್ವದ ಆಶಯ ಸಾಕಾರಗೊಳಿಸಬೇಕು ಎಂದು ಬಟ್ಟೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಆರ್. ಮಾದರ ಹೇಳಿದರು.
ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರ ಗ್ರಾಮ ಪಂಚಾಯಿತಿಯ ಕುಂದ್ರಳ್ಳಿ ಗ್ರಾಮದಲ್ಲಿಯ ಉದ್ಯೋಗ ಖಾತ್ರಿ ಸಮುದಾಯ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಾಗೂ ಕಾರ್ಮಿಕ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬವೆಂದು ಭಾವಿಸಿ ಸಂಭ್ರಮಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರು ಕಡ್ಡಾಯವಾಗಿ ಮತ ಚಲಾಯಿಸಬೇಕು. ಯಾವುದೇ ಆಸೆ-ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸಿ, ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು. ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿಯ ಉದ್ಯೋಗ ಖಾತ್ರಿ ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರಣೆ ನೀಡುವ ಕಾರ್ಯ ಮಾಡುತ್ತಿದ್ದೇವೆ. ಮೇ 7ರಂದು ಲೋಕಸಭೆ ಚುನಾವಣೆಗೆ ಮತದಾನಕ್ಕೆ ನಿಗದಿ ಪಡಿಸಲಾಗಿದೆ. ಎಲ್ಲರೂ ಪ್ರಜಾಪ್ರಭುತ್ವದ ಮತದಾನದಲ್ಲಿ ಭಾಗಿಯಾಗುವಂತೆ ತಿಳಿಸಿದರು.
ಈ ಬೇಸಿಗೆ ಅವಧಿಯಲ್ಲಿ ಹೆಚ್ಚು ಕೆಲಸ ಒದಗಿಸಲು ನರೇಗಾ ಯೋಜನೆಯಡಿ ಬದು ನಿರ್ಮಾಣ ಕಾಮಗಾರಿ ಆರಂಭಿಸಲಾಗಿದ್ದು, ರೈತರು ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೇಕ್ ಕತ್ತರಿಸುವ ಮೂಲಕ ಕಾರ್ಮಿಕ ದಿನಾಚರಣೆ ಆಚರಿಸಲಾಯಿತು. ಕಡ್ಡಾಯ ಮತದಾನ ಮಾಡುವ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು. ಡಿಇಒ ಹಾಲೇಶ ಪಾಟೀಲ, ಗ್ರಾಮ ಕಾಯಕ ಮಿತ್ರ ಗಂಗಮ್ಮ ಹರಿಜನ, ಗ್ರಾ.ಪಂ ಸಿಬ್ಬಂದಿಗಳು, ನರೇಗಾ ಕಾಯಕ ಬಂಧುಗಳು, ಕೂಲಿ ಕಾರ್ಮಿಕರು ಹಾಜರಿದ್ದರು.