ವಿಜಯಸಾಕ್ಷಿ ಸುದ್ದಿ, ಗದಗ : ವಿದ್ಯಾರ್ಥಿಗಳು ಪ್ರತಿಭೆಯನ್ನು ಬೆಳೆಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ಪೂರಕವಾಗಿರುತ್ತವೆ. ಕೇವಲ ಪಠ್ಯಕ್ರಮದ ಅಧ್ಯಯನದಿಂದ ಉತ್ತಮ ವ್ಯಕ್ತಿತ್ವ ಬೆಳೆಯಲಾರದು. ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆ ಹೊಂದಲು ಸಾಧ್ಯವೆಂದು ಡಾ. ರಾಕೇಶ ಹಿರೇಮನಿ ಅಭಿಪ್ರಾಯಪಟ್ಟರು.
ಸ್ಥಳೀಯ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಹಿಳಾ ಸಂಘದ ಆಶ್ರಯದಲ್ಲಿ ‘ಅವಿರ್ಭಾವ’ ಸಾಂಸ್ಕೃತಿಕ ಹಬ್ಬ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಸಂಗೀತ ಶಿಕ್ಷಕ ಮಹಾಂತೇಶ ಮಾದರ ಹಾಡಿನ ಸ್ಪರ್ಧೆಯ ನಿರ್ಣಾಯಕರಾಗಿ ಕಾರ್ಯನಿರ್ವಹಿಸಿ, ವಿದ್ಯಾರ್ಥಿಗಳು ಹಾಡಿನ ಸ್ಪರ್ಧೆಯಲ್ಲಿ ಭಾಗವಹಿಸುವಾಗ ಅನುಸರಿಸಬೇಕಾದ ನಿಯಮಗಳನ್ನು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾ ಎಂ.ಎಂ. ಬುರಡಿ ಮಾತನಾಡಿ, ಮೇ. 18ರವರೆಗೆ ನಡೆಯುವ ಫನ್‌ವೀಕ್ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸುವ ಎಲ್ಲ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ಪರ್ಧೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಶಕುಂತಲಾ ಮಾಳೆಕೊಪ್ಪ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಮಹಿಳಾ ಸಂಘದ ಕಾರ್ಯಾಧ್ಯಕ್ಷರಾದ ಪ್ರೊ. ಎಸ್.ಐ. ಪಟ್ಟಣಶೆಟ್ಟರ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರೊ. ಶಿಲ್ಪಾ ಮ್ಯಾಗೇರಿ ಅವರು ಕಾರ್ಯಕ್ರಮ ನಿರೂಪಿಸಿದರು. ಪ್ರೊ. ಪೂಜಾ ಮಳಿಮಠ ವಂದಿಸಿದರು.