ವಿಜಯಸಾಕ್ಷಿ ಸುದ್ದಿ, ಗದಗ : ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ವಿವಿಧ ಇಲಾಖೆಗಳೊಂದಿಗೆ ಸಾರ್ವಜನಿಕರ ಸಹಭಾಗಿತ್ವವೂ ಅವಶ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಅಭಿಪ್ರಾಯಪಟ್ಟರು.
ನಗರದ ಬಸವೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಬುಧವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ ಗದಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಶಿಕ್ಷಣ ಒದಗಿಸುವುದು ಪ್ರತಿಯೊಬ್ಬ ತಂದೆ-ತಾಯಿಯ ಕರ್ತವ್ಯವಾಗಿದೆ. ಬಾಲಕಾರ್ಮಿಕತೆಗೆ ಬಡತನ, ಅನಕ್ಷರತೆ ಕಾರಣಗಳಾಗಿವೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಇಲಾಖೆಯೊಂದಿಗೆ ಕಾನೂನು ನೆರವು ಕಾರ್ಯಕ್ರಮವನ್ನು ಸಹ ಆಯೋಜಿಸಲಾಗುತ್ತಿದೆ. ಬಾಲ ಕಾರ್ಮಿಕತೆ ಕಂಡು ಬಂದರೆ ಕಾರ್ಮಿಕ ಇಲಾಖೆಯೊಂದಿಗೆ ಇತರ ಇಲಾಖೆಗಳೂ ಸಹ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು ಮತ್ತು 1098 ಸಹಾಯವಾಣಿಗೆ ಕರೆ ಮಾಡಿ ತಿಳಿಸಬೇಕು. ಕರೆ ಮಾಡಿದವರ ಹೆಸರನ್ನು ಗೌಪ್ಯವಾಗಿಟ್ಟು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಮೊಹಮ್ಮದ್ ಅಕ್ರಂ ಅಲ್ಲಾಪೂರ ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವ ಸಂಸ್ಥೆಯಲ್ಲಿ ಹಲವು ದೇಶಗಳು ಸರ್ವತೋಮುಖ ಅಭಿವೃದ್ಧಿಗಾಗಿ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಸಹಿ ಮಾಡಿವೆ. ಮಕ್ಕಳನ್ನು ಪೋಷಿಸಿ ಅವರಿಗೆ ಶಿಕ್ಷಣ ನೀಡುವುದು ಪ್ರತಿಯೊಬ್ಬ ಪಾಲಕರ ಕರ್ತವ್ಯವಾಗಿದೆ.
ಬಡತನ, ಅನಕ್ಷರತೆ, ನಿರುದ್ಯೋಗ ಬಾಲಕಾರ್ಮಿಕತೆಗೆ ಕಾರಣಗಳಾಗಿದ್ದು, ಬಾಲಕಾರ್ಮಿಕತೆಯಂತಹ ಅನಿಷ್ಟ ಪದ್ಧತಿಯ ನಿರ್ಮೂಲನೆಗಾಗಿ ಹಲವಾರು ಕಾಯ್ದೆಗಳಿವೆ. ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಭಾಗಿತ್ವವೂ ಸಹ ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಕದ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಮ್.ಎ. ರಡ್ಡೇರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫೀಕಾ ಹಳ್ಳೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಾಧಿಕಾರಿ ರಾಧಾ ಮಣ್ಣೂರ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಅನ್ನಪೂರ್ಣ ಗಾಣಿಗೇರ, ತೋಂಟದಾರ್ಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕೊಟ್ರೇಶ ಮೆಣಸಿನಕಾಯಿ, ಕಾರ್ಮಿಕ ನಿರೀಕ್ಷಕರಾದ ಗಿರೀಶ ಬಂಕದಮನಿ, ಬಿಇಒ ಸಮನ್ವಯಾಧಿಕಾರಿ ಎಫ್.ಎ. ಫಾರೂಕ, ವಕೀಲರಾದ ಬಿ.ಎಚ್. ಮಾಡಲಗಿ, ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.
ಇದೇ ಸಂದರ್ಭದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದ ಪ್ರಯುಕ್ತ ಪ್ರೌಢಶಾಲಾ ಮಟ್ಟದಲ್ಲಿ ಆಯೋಜಿಸಲಾಗಿದ್ದ ಭಾಷಣ, ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸಂದೇಶ ಪಾಟೀಲ ಸ್ವಾಗತಿಸಿದರು. ಕೆ.ಎಂ. ಗೌಡರ ಕಾರ್ಯಕ್ರಮ ನಿರೂಪಿಸಿದರು. ವೈ.ಎಸ್. ಮತ್ತೂರು ವಂದಿಸಿದರು.
ನಿವೃತ್ತ ಕಾರ್ಮಿಕ ಅಧಿಕಾರಿ ಚಂದ್ರಶೇಖರ್ ಎನ್.ಐಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಉಪನ್ಯಾಸ ನೀಡುತ್ತಾ, ಪ್ರತಿ ವರ್ಷ ಜೂನ್ 12ರಂದು ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲಾಗುತ್ತದೆ. ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಟ್ಟರೆ ಅದೇ ಅವರಿಗೆ ದೊಡ್ಡ ಆಸ್ತಿಯಾಗುತ್ತದೆ.
ವಿದ್ಯೆಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಹಾಗೂ ಮಕ್ಕಳಿಗೆ ಯಾವುದೇ ರೀತಿ ತೊಂದರೆಯಾದಲ್ಲಿ ಈ ಕುರಿತು ಗ್ರಾಮಗಳಲ್ಲಿ ಜರುಗುವ ಗ್ರಾಮ ಸಭೆಗಳಲ್ಲಿಯೂ ಸಹ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ವಿವರಿಸಿದರು.