ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ಜನರು ಸಮಸ್ಯೆಗಳ ಬಗ್ಗೆ ಸರ್ಕಾರಿ ಕಚೇರಿಗಳಿಗೆ ಅರ್ಜಿ ಸಲ್ಲಿಸಿದರೆ, ಅಧಿಕಾರಿಗಳು ಸಕಾರಾತ್ಮಕವಾಗಿ ತಕ್ಷಣವೇ ಸ್ಪಂದನೆ ನೀಡಬೇಕು. ಜನರ ಸಮಸ್ಯೆಗಳ ಇತ್ಯರ್ಥಕ್ಕೆ ವಿಳಂಬ ಮಾಡದೇ ತಕ್ಷಣವೇ ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಹೇಳಿದರು.
ಸೋಮವಾರ ಕುಂದಗೋಳದ ಸವಾಯಿ ಗಂಧರ್ವ ಸ್ಮಾರಕ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
2023ರಲ್ಲಿ ಜನಸ್ಪಂದನಾ ಕಾರ್ಯಕ್ರಮ ಪ್ರಾರಂಭವಾಗಿದೆ. ಎಲ್ಲ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಪ್ರತಿ ತಾಲೂಕಿನಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರ ಸಮಸ್ಯೆಗಳನ್ನು ಶೀಘ್ರಗತಿಯಲ್ಲಿ ಇತ್ಯರ್ಥಪಡಿಸುವುದು ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ. ಯಾವುದೇ ಅರ್ಜಿಗೆ ನಿಗದಿತ ಕಾಲಮಿತಿ ಇರುವುದಿಲ್ಲ. ಹೀಗಾಗಿ ಅಧಿಕಾರಿಗಳು ಜನರು ಸಲ್ಲಿಸಿದ ಅರ್ಜಿಗಳಿಗೆ ಅಲ್ಪ ಕಾಲದಲ್ಲೇ ಪರಿಹಾರ ಒದಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ.ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಉಪವಿಭಾಧಿಕಾರಿಗಳಾದ ಶಾಲಂ ಹುಸೇನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಸರ್ಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕುಂದಗೋಳ ತಹಸೀಲ್ದಾರ ಅಶೋಕ ಶಿಗ್ಗಾಂವಿ ಸ್ವಾಗತಿಸಿದರು.
ಜುಲೈ 15ರೊಳಗೆ ಜನರ ಸಮಸ್ಯೆಗಳನ್ನು ಅಧಿಕಾರಿಗಳು ಇತ್ಯರ್ಥಪಡಿಸಬೇಕು. ಅರ್ಜಿಗಳನ್ನು ಗಣಕೀಕರಣ ಮಾಡಿಕೊಂಡು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ತಪ್ಪದೇ ಅರ್ಜಿಗಳಿಗೆ ಸ್ವೀಕೃತಿಯನ್ನು ಪಡೆದುಕೊಳ್ಳಬೇಕು. ಜನರ ಸಮಸ್ಯೆಗಳನ್ನು ಯಾವುದೇ ಅಡೆತಡೆ ಇಲ್ಲದೆ ಇತ್ಯರ್ಥ ಪಡಿಸಬೇಕು. ಗ್ರಾಮ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.