ವಿಜಯಸಾಕ್ಷಿ ಸುದ್ದಿ, ಗದಗ : ಇದೇ ಮೊದಲ ಬಾರಿಗೆ ಗದಗ ನಗರದಲ್ಲಿ ರಾಜ್ಯಮಟ್ಟದ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಮಾವೇಶವನ್ನು ಆಯೋಜಿಸಲು ತೀರ್ಮಾನಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ನಗರದ ಪತ್ರಿಕಾ ಭವನದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷರಾದ ತಿಪ್ಪೇಸ್ವಾಮಿ ಅವರು ವಹಿಸಿಕೊಂಡು ಸಮಾವೇಶದ ರೂಪರೇಷೆಗಳ ಬಗ್ಗೆ ಸಂಪಾದಕರ ಅಭಿಪ್ರಾಯ ಸಂಗ್ರಹಿಸಿದರು.
ಈ ವೇಳೆ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಮಂಜುನಾಥ ಅಬ್ಬಿಗೆರಿ, ಪ್ರಥಮ ಸಮಾವೇಶ ಮಾಡುವ ಅವಕಾಶ ಗದಗ ಜಿಲ್ಲೆಗೆ ಒದಗಿಬಂದಿದ್ದು ಹೆಮ್ಮೆಯ ವಿಷಯವಾಗಿದೆ. ಸಮಾವೇಶವನ್ನು ಅತ್ಯಂತ ಅಚ್ಚುಕಟ್ಟಾಗಿ ಜವಾಬ್ದಾರಿಯಿಂದ ನಾವು ನಿರ್ವಹಿಸಲು ಸಿದ್ಧರಿದ್ದೇವೆ. ರಾಜ್ಯಾದ್ಯಂತ ಆಗಮಿಸುವ ಎಲ್ಲ ಸಂಪಾದಕರಿಗೆ ಯಾವುದೇ ಕೊರತೆ ಆಗದಂತೆ ಗದಗ ಜಿಲ್ಲೆಯ ಎಲ್ಲ ಸಂಪಾದಕರು ನೋಡಿಕೊಳ್ಳುತ್ತೇವೆ ಎಂದು ರಾಜ್ಯಾಧ್ಯಕ್ಷರಿಗೆ ಭರವಸೆ ನೀಡಿದರು.
ಸಮಾವೇಶವನ್ನು ಗದಗ ನಗರದ ಹುಬ್ಬಳ್ಳಿ ರಸ್ತೆಯಲ್ಲಿರುವ ಡಾ. ಪಂ. ಭೀಮಸೇನ ಜೋಶಿ ರಂಗಮಂದಿರದಲ್ಲಿ ನಡೆಸಲು ಸರ್ವ ಸಂಪಾದಕರ ಒಪ್ಪಿಗೆಯ ಮೇರೆಗೆ ತೀರ್ಮಾನಿಸಲಾಯಿತು. ಇದೇ ವೇಳೆ ಸ್ಮರಣ ಸಂಚಿಕೆ ಸಮಿತಿ ಸೇರಿದಂತೆ ಹಲವು ಸಮಿತಿಗಳನ್ನು ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ರಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯರು, ಗದಗ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಹುಬ್ಬಳ್ಳಿ, ತುಮಕೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ಗುಲ್ಬರ್ಗ, ರಾಯಚೂರು ಜಿಲ್ಲಾಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸರ್ವ ಸದಸ್ಯರು ಪಾಲ್ಗೊಂಡಿದ್ದರು.