ಹಬ್ಬದ ಸಂಭ್ರಮದಲ್ಲಿ ಕೊರೊನಾ ನಿಯಂತ್ರಣ ಮರೆಯದಿರಿ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಕೋವಿಡ್-19 ನಡುವೆಯೂ ಸಾಲು ಸಾಲು ಹಬ್ಬಗಳು ಬರುತ್ತಿದ್ದು, ಹಬ್ಬಗಳ ಸಡಗರದ ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಸಾರ್ವಜನಿಕರು ಸಂಭ್ರಮದ ಸಂದರ್ಭದಲ್ಲಿ ಮೈಮರೆಯದೆ ಪ್ರತಿಯೊಬ್ಬರೂ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಾಗೃತಿ ಮೂಡಿಸುವುದರೊಂದಿಗೆ ಸಂಬಂಧಿಸಿದ ಅಧಿಕಾರಿಗಳು ಸೂಕ್ರ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದರು.
ಮಾರುಕಟ್ಟೆಗಳಲ್ಲಿ ಎಚ್ಚರಿಕೆ ಅಗತ್ಯ: ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಬ್ಬಗಳ ಖರೀದಿಗಾಗಿ ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಗಳಿಗೆ ಬರುವ ಜನರಿಂದ ಜನದಟ್ಟಣೆ ಹೆಚ್ಚುವ ಸಾಧ್ಯತೆಗಳಿದ್ದು, ಮಾರುಕಟ್ಟೆಗಳಲ್ಲಿ ಹೆಚ್ಚು ಮುಂಜಾಗ್ರತೆ ಕೈಗೊಳ್ಳಬೇಕು. ಕೊರೊನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಗ್ರಾಹಕರು ಹಾಗೂ ಅಂಗಡಿ ಮುಂಗಟ್ಟುಗಳ ಮಾಲೀಕರು ಮಾಸ್ಕ್ ಧರಿಸಿ, ವ್ಯಕ್ತಿಗತ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಬೇಕು. ಹಬ್ಬದ ಆಚರಣೆಯಲ್ಲಿ ಕುಟುಂಬಗಳು ಕೊರೊನಾ ಸಂಕಷ್ಟಕ್ಕೊಳಗಾಗದಂತೆ ಕೋವಿಡ್ ಮುನ್ನೆಚ್ಚರಿಕೆ ವಹಿಸಬೇಕು.
ಸಾರ್ವಜನಿಕರು ಕೊರೊನಾ ಸೋಂಕು ನಿರ್ಲಕ್ಷಿಸದೆ, ಅದರಿಂದ ದೂರವಿರಲು ಪ್ರಯತ್ನಿಸಬೇಕು. ಆರೋಗ್ಯ ಇಲಾಖೆಯ ಸಿಬ್ಬಂದಿ, ನಗರ ಹಾಗೂ ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಮನೆ ಕಾಮಗಾರಿ ಪೂರ್ಣಗೊಳಿಸಿ: ಕಳೆದ ವರ್ಷದ ಪ್ರವಾಹಪೀಡಿತ ಗ್ರಾಮಗಳ ಸಂತ್ರಸ್ತರಿಗೆ ಮಂಜೂರು ಆಗಿರುವ ಮನೆಗಳು ತ್ವರಿತವಾಗಿ ಪೂರ್ಣಗೊಳ್ಳಬೇಕು. ಮನೆಗಳು ನಿರ್ಮಾಣದ ಯಾವ ಹಂತದಲ್ಲಿವೆ ಎಂದು ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಾಮಗಾರಿ ಮುಗಿಸುವಂತೆ ಸೂಚಿಸಬೇಕು.
ಮನೆ ಮಂಜೂರಾಗಿದ್ದರೂ ಮನೆ ನಿರ್ಮಿಸದ ಫಲಾನುಭವಿಗಳಿಗೆ ಸೂಕ್ತ ಕಾನೂನು ಕ್ರಮ ವಹಿಸಬೇಕು. ಹಾಗೂ ಕಳೆದ ವರ್ಷ ಮನೆ ಹಾನಿ ಪರಿಹಾರ ಕುರಿತು ಸ್ವೀಕೃತವಾದ ಅರ್ಜಿಗಳನ್ನು ಇತ್ಯರ್ಥಗೊಳಿಸಬೇಕು. ಪ್ರಸಕ್ತ ಸಾಲಿನ ನೆರೆ ಪ್ರವಾಹ ಸಂದರ್ಭದಲ್ಲಿ ಹಾನಿಗೊಳಗಾದ ಅರ್ಹ ಕುಟುಂಬಗಳಿಗೆ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.
ಸಭೆಯಲ್ಲಿ ಜಿ.ಪಂ. ಸಿಇಒ ಡಾ. ಆನಂದ ಕೆ., ಡಿಎಚ್‌ಓ ಡಾ. ಸತೀಶ್ ಬಸರಿಗೀಡದ, ತಹಶೀಲ್ದಾರರು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Advertisement

Spread the love

LEAVE A REPLY

Please enter your comment!
Please enter your name here