ವಿಜಯಸಾಕ್ಷಿ ಸುದ್ದಿ, ಗದಗ : ಸುಂದರ ಬದುಕು ಹಾಗೂ ಆರೋಗ್ಯಕರ ಸಮಾಜ ಕಟ್ಟುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ನ ಶಿಸ್ತು ಮತ್ತು ಕೌಶಲ್ಯದ ಪಾತ್ರ ಮಹತ್ವದ್ದಾಗಿದೆ. ಇದರಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ, ಸಂಸ್ಕೃತಿಯ ಅರಿವನ್ನು ಮೂಡಿಸುವ ಕೆಲಸ ಹೆಚ್ಚಾಗುತ್ತದೆ. ಮುಂದಿನ ಪೀಳಿಗೆಗೆ ಉತ್ತಮ ನಾಗರಿಕರನ್ನು ನಿರ್ಮಾಣ ಮಾಡುವ ಕೆಲಸ ಸ್ಕೌಟ್ಸ್ ಮತ್ತು ಗೈಡ್ಸ್ನಿಂದಾಗಬೇಕು ಎಂದು ವಿದ್ಯಾದಾನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀನಿವಾಸ ಹುಯಿಲಗೋಳ ಹೇಳಿದರು.
ಇಲ್ಲಿನ ವಿದ್ಯಾದಾನ ಕ್ಲಾಸಿಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಮೂಹ ಸಂಪನ್ಮೂಲ ವ್ಯಕ್ತಿ ರವಿ ಎಂ.ಹೆಬ್ಬಳ್ಳಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ದೈಹಿಕ, ಮಾನಸಿಕ, ಬೌದ್ಧಿಕತೆಯನ್ನು ಸಾಧಿಸುವಲ್ಲಿ ಹಾಗೂ ಅವರ ಬೆಳವಣಿಗೆಗೆ ಕೊಡುಗೆ ನೀಡುವುದು ಘಟಕಗಳ ಮುಖ್ಯ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರಿಕರಾಗಿ ಮತ್ತು ಸ್ಥಳೀಯ, ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಮುದಾಯಗಳ ಸದಸ್ಯರಾಗಿ, ಸಾಮಾಜಿಕ ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಸಾಮರ್ಥ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬಹುದಾಗಿದೆ ಎಂದು ಕರೆ ನೀಡಿದರು.
ಆಡಳಿತಾಧಿಕಾರಿ ಡಾ. ಗಂಗೂಬಾಯಿ ಪವಾರ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳು ಸಮುದಾಯದಲ್ಲಿ ಸಮಾಜ ಸೇವೆಗೆ ಒತ್ತು ನೀಡುತ್ತವೆ. ಭರವಸೆ, ಕಾನೂನಿನಲ್ಲಿ ಅಂತರ್ಗತವಾಗಿರುವ ಮೌಲ್ಯಗಳಿಗೆ ಬದ್ಧತೆ, ಕೌಶಲ್ಯವನ್ನು ಅಭಿವೃದ್ಧಿಪಡಿಸುವುದು, ಸ್ವಾಭಿಮಾನವನ್ನು ಹೆಚ್ಚಿಸುವುದು, ಸಹಾಯ ಹಸ್ತ, ಶಿಸ್ತು ಮತ್ತು ನಡತೆ ಮುಂತಾದ ಸಾಮಾಜಿಕ ಮೌಲ್ಯಗಳನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳಿಂದ ಪಡೆಯಬಹುದಾಗಿದೆ ಎಂದರು.
ಶಾಲೆಯ ಶೈಕ್ಷಣಿಕ ಮಾರ್ಗದರ್ಶಕ ಪ್ರತೀಕ ಎಸ್.ಹುಯಿಲಗೋಳ, ಕನ್ನಡ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಎಂ.ವಿ. ಹವಾಲ್ದಾರ, ಶಾಲೆಯ ಮುಖ್ಯೋಪಾಧ್ಯಾಯ ಎಂ.ಆರ್. ಡೊಳ್ಳಿನ ಸ್ಕೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಸ್ಕೌಟ್ಸ್ ಘಟಕದ ಕ್ಯಾಪ್ಟನ್ ವಿರೇಶ ಭಜಂತ್ರಿ ಪದಾಧಿಕಾರಿಗಳಿಗೆ ಪಥಸಂಚಲನ ಮಾಡಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ಗೀತೆಯನ್ನು ಹಾಡಿಸಿದರು.
ತನುಶ್ರೀ ಹಾದಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಅಶ್ವಿನಿ ಜೋಶಿ ಸ್ವಾಗತಿಸಿದರು. ಶಿಕ್ಷಕಿ ರೇಖಾ ಬಡಿಗೇರ ನಿರೂಪಿಸಿದರು. ಪ್ರಭಾವತಿ ಹಿರೇಮಠ ವಂದಿಸಿದರು.
ಸಂಸ್ಥೆಯ ನಿರ್ದೇಶಕ ಡಾ. ಪವನ ಹುಯಿಲಗೋಳ ಮಾತನಾಡಿ, ಪ್ರಸ್ತುತ ಡೆಂಘೀ ಜ್ವರವು ವಿಪರೀತ ಕಂಡು ಬಂದಿದೆ. ಇಂತಹ ಸಂದರ್ಭಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳು ಸಮಾಜದ ಜನರಿಗೆ ಹಾಗೂ ತಮ್ಮ ಕುಟುಂಬದ ಸದಸ್ಯರಿಗೆ ಅದರ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಮಾಜ ಸೇವೆಯನ್ನು ಮಾಡಬಹುದಾಗಿದೆ ಎಂದರು.