ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಹರ್ಷಿ ಶ್ರೀ ವಾಲ್ಮೀಕಿ ಭವನವು ಆಗಸ್ಟ್ 7ರ ಬೆಳಿಗ್ಗೆ 11 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಈಶ್ವರ ಹೇಳಿದರು.
ಅವರು ಸೋಮವಾರ ಶಿರಹಟ್ಟಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕಾರ್ಯಕ್ರಮದ ಸಾನ್ನಿಧ್ಯವನ್ನು ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ, ಶಿರಹಟ್ಟಿಯ ಜ.ಫಕೀರ ದಿಂಗಾಲೇಶ್ವರ ಸ್ವಾಮೀಜಿ ವಹಿಸಲಿದ್ದಾರೆ. ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲನೆರವೇರಿಸುವರು. ಅಧ್ಯಕ್ಷತೆಯನ್ನು ಶಾಸಕ ಡಾ. ಚಂದ್ರು ಲಮಾಣಿ, ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ನಂತರ ಸಚಿವ ಸತೀಶ ಜಾರಕಿಹೊಳಿ ಅವರು ಶಿರಹಟ್ಟಿಯ ಶ್ರೀ ಜ.ಫಕೀರೇಶ್ವರ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಮಠಕ್ಕೆ ರಾಜ್ಯ ಹೆದ್ದಾರಿಯಿಂದ ಸಂಪರ್ಕ ಕಲ್ಪಿಸುವ 20 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದರು.
ಶಿರಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಮಾಯೂನ್ ಮಾಗಡಿ ಮಾತನಾಡಿ, ಸಚಿವ ಜಾರಕಿಹೊಳಿ ಅವರೇ ವಾಲ್ಮೀಕಿ ಭವನ ನಿರ್ಮಾಣಕ್ಕೆ ಅಡಿಗಲ್ಲನ್ನು ಹಾಕಿದ್ದರು. ಇದೀಗ ಅವರೇ ಲೋಕಾರ್ಪಣೆಯ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಶಿರಹಟ್ಟಿ ಪಟ್ಟಣದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಸುಸಜ್ಜಿತ ಸರ್ಕ್ಯೂಟ್ ಹೌಸ್ ನಿರ್ಮಿಸುವುದಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದರು.
ಶಿರಹಟ್ಟಿ ತಾಲೂಕಾ ಎಸ್‌ಟಿ ಸಮಾಜದ ಅಧ್ಯಕ್ಷ ಶಿವನಗೌಡ ಪಾಟೀಲ ಮಾತನಾಡಿ, ತಾಲೂಕಿನಲ್ಲಿ ಬಹುತೇಕ ರಸ್ತೆಗಳು ಹಾಳಾಗಿದ್ದು, ಇವೆಲ್ಲವುಗಳ ದುರಸ್ತಿಗಾಗಿ ಸಚಿವ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಮಹೇಂದ್ರ ಮುಂಡವಾಡ, ಬಸನಗೌಡ ಪಾಟೀಲ, ಮಾರುತಿ ಅಮರಾಪೂರ, ಕೆ.ಓ. ಹೂಲಿಕಟ್ಟಿ, ಯಲ್ಲಪ್ಪ ಬಂಗಾರಿ, ಬಸವರಾಜ ನಾಯ್ಕರ ಮುಂತಾದವರು ಉಪಸ್ಥಿತರಿದ್ದರು.