ವಿಜಯಸಾಕ್ಷಿ ಸುದ್ದಿ, ಗದಗ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಸೋಮವಾರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಿದರು.
ಕಾನೂನು, ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ನೇತೃತ್ವದಲ್ಲಿ ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೆಲಕಾಲ ಧರಣಿ ನಡೆಸಿದರು.
ಈ ಸಂದರ್ಭದಲ್ಲಿ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆ, ಬಡವರ ಪರವಾದ ಕಾರ್ಯಕ್ರಮಗಳನ್ನು ವಿರೋಧಿಸುವ ಕೇಂದ್ರ ಸರಕಾರ ಮತ್ತು ರಾಜಕೀಯ ಶಕ್ತಿಗಳು ರಾಜಭವನವನ್ನು ದುರುಪಯೋಗ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ.
ರಾಜ್ಯಪಾಲರ ನಡೆಯನ್ನು ರಾಜಕೀಯವಾಗಿ ಮತ್ತು ಕಾನೂನು ರೀತಿಯಿಂದ ಎದುರಿಸುತ್ತೇವೆ. ಮಂತ್ರಿಮಂಡಲದ 33 ಸದಸ್ಯರು, ಒಟ್ಟು 136 ಶಾಸಕರು ಸಿದ್ದರಾಮಯ್ಯ ಪರ ಇದ್ದೇವೆ. ಈ ಹೋರಾಟದಲ್ಲಿ ಜಯ ಸಾಧಿಸುತ್ತೇವೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್. ಪಾಟೀಲ ಮಾತನಾಡಿ, ರಾಜ್ಯಪಾಲರ ನಡೆ ಸ್ಪಷ್ಟ ಜನಾದೇಶದ ಸರಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರವಾಗಿದೆ. ಇದರಿಂದ ಕೇಂದ್ರ ಸರಕಾರದ ರಾಜಕೀಯ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ ಎನ್ನುವುದು ಸ್ಪಷ್ಟವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ರಾಜ್ಯಪಾಲರ ಕಚೇರಿಯನ್ನು ದುರುಪಯೋಗ ಮಾಡಿಕೊಂಡು ಮುಖ್ಯಮಂತ್ರಿಗಳ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯಪಾಲರ ನಡೆ ಸಂವಿಧಾನದ ಮೌಲ್ಯಗಳಿಗೆ ತೀವ್ರ ಧಕ್ಕೆ ತಂದಿದೆ. ಸಾಂವಿಧಾನಿಕ ಹುದ್ದೆಯಲ್ಲಿದ್ದರೂ ಒಂದು ರಾಜಕೀಯ ಪಕ್ಷದ ಏಜೆಂಟರಾಗಿ ಕಾರ್ಯನಿರ್ವಹಿಸುವ ರಾಜ್ಯಪಾಲರ ನಡೆ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಮಾರಕವಾಗಿದೆ. ಹೀಗಾಗಿ ರಾಷ್ಟçಪತಿಗಳು ತಕ್ಷಣ ರಾಜ್ಯಪಾಲರಿಗೆ ನಿರ್ದೇಶನ ನೀಡಿ, ಪ್ರಾಸಿಕ್ಯೂಶನ್ ಮಂಜೂರಾತಿ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಜಿ.ಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರುಡಗಿ, ಸುಜಾತಾ ದೊಡ್ಡಮನಿ, ವಿ.ಬಿ. ಸೋಮನಕಟ್ಟಿಮಠ, ಟಿ. ಈಶ್ವರ, ಬಿ.ಬಿ. ಅಸೂಟಿ, ವಿದ್ಯಾಧರ ದೊಡ್ಡಮನಿ, ಕೃಷ್ಣಗೌಡ ಪಾಟೀಲ, ಅಶೋಕ ಮಂದಾಲಿ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಕೇಂದ್ರ ಮಂತ್ರಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ತನಿಖೆ ನಡೆಸಿ ವರದಿ ಕೊಟ್ಟಿದೆ. ಆದರೂ ಅವರ ವಿರುದ್ಧ ಕ್ರಮ ಕೈಗೊಳ್ಳದ ರಾಜ್ಯಪಾಲರು, ಕೇವಲ ಒಬ್ಬ ವ್ಯಕ್ತಿ ದೂರು ನೀಡಿದ ಕಾರಣಕ್ಕೆ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿದ್ದಾರೆ. ಅಲ್ಲದೇ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ ಸಹಿತ ಅನೇಕ ಕೇಂದ್ರ ಮಂತ್ರಿಗಳು 10 ದಿನ ತಡೆಯಿರಿ, ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಡುತ್ತಾರೆ ಎಂದು ಭವಿಷ್ಯ ನುಡಿದಿರುವುದು ನೋಡಿದರೆ, ರಾಜ್ಯಪಾಲರು ಒಂದು ಪಕ್ಷದ ಕೈಗೊಂಬೆಯಾಗಿರುವುದು ಸ್ಪಷ್ಟವಾಗುತ್ತದೆ.
-ಎಚ್.ಕೆ. ಪಾಟೀಲ.
ಕಾನೂನು, ಪ್ರವಾಸೋದ್ಯಮ ಸಚಿವರು.