ದಾವಣಗೆರೆ:- ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟದಲ್ಲಿ ಕಲುಷಿತ ನೀರು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಜರುಗಿದೆ.
ಕಲುಷಿತ ನೀರು ಕುಡಿದು ಗ್ರಾಮದ 7 ಜನರು ಆಸ್ಪತ್ರೆಗೆ ದಾಖಲಾಗಿದ್ದರು. 60 ವರ್ಷದ ಚಂದ್ರಮ್ಮ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ.
ಕಲುಷಿತ ನೀರು ಸೇವಿಸಿ ತೀವ್ರ ಆಸ್ಪಸ್ಥರಾಗಿದ್ದ ಚಂದ್ರಮ್ಮ ಅವರನ್ನು ಆಗಸ್ಟ್ 21ರಂದು ಮೆಗ್ಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ವಾಂತಿ ಬೇಧಿ, ಜ್ವರದಿಂದ ಬಳಲುತ್ತಿದ್ದ ಚಂದ್ರಮ್ಮ ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನುಳಿದ ಆರು ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಮರಳಿದ್ದಾರೆ.



