ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದೊಂದಿಗೆ ಸಿಗರೇಟು, ಟೀ ಕುಡಿಯುತ್ತಿರುವ ಫೋಟೋ ವೈರಲ್ ಆಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಜಿ&ಐಜಿಪಿ ಅಲೋಕ್ ಮೋಹನ್ ಅವರಿಂದ ಮಾಹಿತಿ ಪಡೆದು ಖಡಕ್ ಸೂಚನೆ ನೀಡಿದರು. ಕೂಡಲೆ ದರ್ಶನ ಮತ್ತು ಇತರರನ್ನು ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ, “ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.