ವಿಜಯಸಾಕ್ಷಿ ಸುದ್ದಿ, ಗದಗ : 2024-25ನೇ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವ ಸಲುವಾಗಿ ಆನ್‌ಲೈನ್ ಅರ್ಜಿಗೆ ಉನ್ನತ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹ ಎಂದು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಾ.ಹನುಮಂತಗೌಡ ಅರ್.ಕಲ್ಮನಿ ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅತಿಥಿ ಉಪನ್ಯಾಸಕರನ್ನು ಮುಂದುವರೆಸುತ್ತಿರುವುದು ಸಂತಸದ ವಿಷಯವಾಗಿದ್ದು, ನಮಗೆ ಸೇವಾ ಭದ್ರತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಇಟ್ಟ ಮೊದಲ ಹೆಜ್ಜೆಯಾಗಿದೆ. ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಜನವರಿ 2025ರೊಳಗೆ UGC ಅರ್ಹತೆಯ ಮಾನದಂಡದ ತೂಕಗತ್ತಿ ಆತಂಕಕ್ಕೆ ಎಡೆ ಮಾಡಿಕೊಟ್ಟಿದ್ದು, ಇದರಿಂದ ವಿನಾಯಿತಿ ನೀಡಬೇಕು ಎಂದಿದ್ದಾರೆ.
ಈ ವರ್ಷ SEP ಜಾರಿಯಿಂದಾಗಿ ಕಾರ್ಯಭಾರದ ಕೊರತೆ ಉಂಟಾಗಿದ್ದು, ಬಹಳಷ್ಟು ಜನ ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳಲಿದ್ದಾರೆ. ಒಂದು ತರಗತಿಗೆ ನೂರು ಜನ ವಿದ್ಯಾರ್ಥಿಗಳ ಬದಲಾಗಿ 50 ಜನ ವಿದ್ಯಾರ್ಥಿಗಳಿಗೆ ಒಂದು ತರಗತಿಯಂತೆ ಮಾಡಿದರೆ ಕಾರ್ಯಭಾರದ ಕೊರತೆಯಾಗದೆ ವಿದ್ಯಾರ್ಥಿಗಳಿಗೂ ಅನುಕೂಲವಾಗುತ್ತದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪೀಟರ್ ವಿನೋದ್ ಚೆಂದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.