ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ

0
Celebrate an eco-friendly Ganesha festival
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗೌರಿಗಣೇಶ ಹಬ್ಬವನ್ನು ರಾಜ್ಯದಲ್ಲಿ ಸೆಪ್ಟೆಂಬರ್ 7ರಿಂದ ಸಂಭ್ರಮದಿಂದ ಆಚರಿಲಾಗುತ್ತದೆ. ಪಿ.ಒ.ಪಿ ಗಣೇಶ ಮೂರ್ತಿಗಳನ್ನು ತಯಾರಿಸುವುದನ್ನು, ಮಾರಾಟ ಮಾಡುವುದನ್ನು ಹಾಗೂ ಪ್ರತಿಷ್ಠಾಪಿಸುವುದನ್ನು ನಿರ್ಬಂಧಿಸಿದ್ದು, ಪರಿಸರ ಮಾಲಿನ್ಯಕ್ಕೆ ಅವಕಾಶ ಮಾಡಿಕೊಡದಂತೆ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಲು ಮಾರ್ಗಸೂಚಿಗಳನ್ನು ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ.

Advertisement

ಗದಗ ಜಿಲ್ಲಾ ಮಟ್ಟದಲ್ಲಿ ಇಂಧನ, ನಗರಾಭಿವೃದ್ಧಿ, ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆಗಳ ಮುಖ್ಯಸ್ಥರನ್ನೊಳಗೊಂಡ ಏಕಗವಾಕ್ಷಿ ಸಮಿತಿಯನ್ನು ಗದಗ ಶಹರ ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್ 1ರಿಂದ ಸ್ಥಾಪಿಸಲಾಗಿದೆ. ಆರಕ್ಷಕ ಉಪ ಅಧೀಕ್ಷಕರು ಸಮಿತಿಯ ಅಧ್ಯಕ್ಷರಾಗಿದ್ದು, ಗದಗ-ಬೆಟಗೇರಿ ನಗರಸಭೆ ಆಯುಕ್ತರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ, ಹೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಪರಿಸರ ಅಧಿಕಾರಿ ಇವರುಗಳು ಸಮಿತಿಯ ಸದಸ್ಯರಾಗಿರುತ್ತಾರೆ.

ತಮ್ಮ ಅಧೀನದಲ್ಲಿರುವ ಜವಾಬ್ದಾರಿಯುತ ಅಧಿಕಾರಿ/ ಸಿಬ್ಬಂದಿಗಳನ್ನು ನೇಮಿಸಿ, ಏಕಗವಾಕ್ಷಿ ಸಮಿತಿ ನಿಗದಿಪಡಿಸಿದ ಕರ್ತವ್ಯ ನಿರ್ವಹಿಸಲು ನಿರ್ದೇಶನ ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಏಕ ಗವಾಕ್ಷಿ ಸಮಿತಿಯ ಕರ್ತವ್ಯಗಳು: ಸರಕಾರದ ಸುತ್ತೋಲೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ತಮ್ಮ ಅಧೀನ ಅಧಿಕಾರಿ/ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡುವುದು. ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಮುಂತಾದ ಪರವಾನಿಗೆಗಳನ್ನು ನೀಡಲು ಕಂದಾಯ, ಲೋಕೋಪಯೋಗಿ, ಇಂಧನ ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆಗಳು ಹಾಗೂ ಸ್ಥಳೀಯ ಸಂಸ್ಥೆಗಳು ಸಂಯೋಜಿತವಾಗಿ ಗಣೇಶ ವಿಗ್ರಹ ಸ್ಥಾಪನೆಗೆ ಅಗತ್ಯವಿರುವ ಪರವಾನಗಿಯನ್ನು ಏಕಗವಾಕ್ಷಿ ಅಡಿಯಲ್ಲಿ ನೀಡಲು ಸೂಕ್ತ ಕ್ರಮ ವಹಿಸುವುದು. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ವಾರ್ಡ್ಗಳ ಮಟ್ಟದಲ್ಲಿ ಸಂಬಂಧಿಸಿದ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ಏಕಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಿ ಪ್ರಚುರ ಪಡಿಸುವುದು.

ಕಾರ್ಯಕ್ರಮದ ಆಯೋಜಕರಿಂದ ನಿಗದಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಪಡೆಯುವುದು ಹಾಗೂ ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ಜಂಟಿ ತಪಾಸಣೆ ಮಾಡಿ ಮೂರು ದಿನಗಳೊಳಗಾಗಿ ನಿಯಮಾನುನಾರ ಪರವಾನಿಗೆಯನ್ನು ನೀಡಲು ಕ್ರಮ ವಹಿಸುವುದು. ಪರವಾನಿಗೆ ನೀಡುವ ಮುನ್ನ ಆಯೋಜಕರಿಂದ ಕಾಲಕಾಲಕ್ಕೆ ನ್ಯಾಯಾಲಯದ ನಿರ್ದೇಶನಗಳನ್ನು ಹಾಗೂ ಸರ್ಕಾರದ ವಿವಿಧ ಇಲಾಖೆಗಳಿಂದ ನೀಡಿರುವ ಸೂಚನೆಗಳನ್ನು ಪಾಲಿಸುವ ಬಗ್ಗೆ ಮುಚ್ಚಳಿಕೆಯನ್ನು ಪಡೆಯುವುದು. ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಆಯೋಜಕರಿಂದ ಖಾತರಿಪಡಿಸಿಕೊಳ್ಳುವುದು, ಅಗತ್ಯವಿರುವ ಕಡೆ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸುವಂತೆ ಆಯೊಜಕರಿಗೆ ಸೂಚಿಸುವುದು.

ಸಾರ್ವಜನಿಕವಾಗಿ ಇಡಲಾಗುವ ಗಣೇಶ, ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳ್ಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಈ ಅನುಮತಿ ಪತ್ರಗಳನ್ನು ಲೈಸೆನ್ಸ್ ನೀಡುವ ಸಂದರ್ಭಗಳು ಪ್ಲಾಸ್ಟಿಕ್-ಪ್ಲೆಕ್ಸ್ ಮತ್ತಿತರ ವಸ್ತುಗಳ ಬಳಕೆ ನಿಷೇಧಿಸುವುದು ಹಾಗೂ ರಾತ್ರಿ 10ರಿಂದ ಬೆಳಗ್ಗೆ 5 ಗಂಟೆಯ ತನಕ ಧ್ವನಿವರ್ಧಕಗಳ ಬಳಕೆ ನಿಷೇಧಿಸುವುದು. ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ತದನಂತರ ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸುವುದನ್ನು ಖಾತ್ರಿಪಡಿಸಿಕೊಳ್ಳುವುದು. ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಹಸಿ ಕಸ ಪ್ರತ್ಯೇಕಿಸಿ, ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ಪ್ರತ್ಯೇಕವಾಗಿ ವಿಲೇವಾರಿ ಮಾಡುವುದು.

ವಿಶೇಷವಾಗಿ ಹೈ-ಟೆನ್ಸನ್ ತಂತಿ ಹಾದುಹೋಗಿರುವ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿ ನಿರ್ಭಂಧಿಸುವುದು. ಉತ್ಸವಕ್ಕೆ ಮುಂಚಿತವಾಗಿ ನಾಗರಿಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಮತ್ತಿತರ ಎಲ್ಲಾ ಸಂಘ-ಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಕೋಮುಸೌಹಾರ್ದ ಸಭೆಗಳನ್ನು ಆಯೋಜಿಸಲು ಕ್ರಮವಹಿಸುವುದು. ಪಿ.ಓ.ಪಿ ಗಣೇಶ ಮೂರ್ತಿಗಳನ್ನು ಸ್ಥಾಪಿಸಲು ಅವಕಾಶ ನೀಡಬಾರದು. ಸಾರಿಗೆ ಇಲಾಖೆ ಅಧಿಕಾರಿಗಳು ಬೇರೆ ಊರುಗಳಿಂದ ಮತ್ತು ರಾಜ್ಯಗಳಿಂದ ಬರುವ ಪಿಓಪಿ ವಿಗ್ರಹಗಳನ್ನು ತಡೆಗಟ್ಟಲು ಚೆಕ್‌ಪೋಸ್ಟ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here