ವಿಜಯಸಾಕ್ಷಿ ಸುದ್ದಿ, ಗದಗ : ವಿಶ್ವ ಹೃದಯ ದಿನದ ಅಂಗವಾಗಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಮಾಹಿತಿ ಶಿಕ್ಷಣ ಮತ್ತು ಸಂವಹನ ವಿಭಾಗ ಹಾಗೂ ಜಿಮ್ಸ್ ಸರಕಾರಿ ನರ್ಸಿಂಗ್ ಕಾಲೇಜ್, ಗದಗ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಹೃದಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಬಿ.ಸಿ. ಕರಿಗೌಡರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವ ಹೃದಯ ದಿನವನ್ನು ಪರಿಣಾಮಕಾರಿಯಾಗಿ ಜನರಲ್ಲಿ ಜಾಗೃತಿಯನ್ನು ಮೂಡಿಸುವುದು ನಮ್ಮೆಲ್ಲರ ಮುಖ್ಯ ಕರ್ತವ್ಯವಾಗಿದೆ. ಕೋವಿಡ್ ಗಂಡಾಂತರದ ನಂತರ ಹೃದಯ ಸಂಬಂಧಿ ಕಾಯಿಲೆಗಳು ಗಣನೀಯವಾಗಿ ಹೆಚ್ಚಿಗೆಯಾಗಿರುವುದರಿಂದ ಅವುಗಳನ್ನು ಹತೋಟಿಗೆ ತರಲು ಶ್ರಮಿಸಬೇಕೆಂದು ತಿಳಿಸಿದರು.
ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ.ಸಂಗಮೇಶ ಅಸೂಟಿ ಮಾತನಾಡಿ, ಆಧುನಿಕ ಜೀವನ ಶೈಲಿ, ಧೂಮಪಾನ, ಮಧುಮೇಹ, ಅಧಿಕ ರಕ್ತದೊತ್ತಡ, ಬೊಜ್ಜು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಇವೆಲ್ಲವುದರ ಕಾರಣಗಳಿಂದಾಗಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಎಚ್ಚರಿಕೆಯ ಗಂಟೆಯಾಗಿದೆ. ಕೊರೋನಾ ನಚಿತರದ ದಿನಗಳಲ್ಲಿ ಹೃದ್ರೋಗದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಯುವ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ಹಠತ್ತಾಗಿ ಹೃದಯಾಘಾತ, ಹೃದಯ ಸ್ತಂಭನಕ್ಕೀಡಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ.
ಹೃದ್ರೋಗಳಿಂದ ಉಂಟಾಗುತ್ತಿರುವ ಜೀವ ಹಾನಿ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು `ಪುನೀತ್‌ರಾಜ್‌ಕುಮಾರ್ ಹೃದಯ ಜ್ಯೋತಿ’ ಮುಂತಾದ ಕಾರ್ಯಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.
ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ. ಜ್ಯೋತಿ ಕರಿಗೌಡರ ಮಾತನಾಡಿ, ನಮ್ಮ ದೇಹವನ್ನು ಸಧೃಡವಾಗಿಟ್ಟುಕೊಳ್ಳಲು ಪ್ರತಿದಿನ ವ್ಯಾಯಾಮ, ಯೋಗಾಸನ, ಪೌಷ್ಟಿಕ ಆಹಾರ ಹಾಗೂ ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 7ರಿಂದ 8 ಗಂಟೆಯವರೆಗೆ ಆರೋಗ್ಯಕರ ನಿದ್ರೆ ಅವಶ್ಯಕವಾಗಿರುತ್ತದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಚಿಕ್ಕಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀನಿವಾಸ ಆರೇರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ ಚವ್ಹಾನ್, ಜಿಮ್ಸ್ ನರ್ಸಿಂಗ್ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ಜಿಲ್ಲಾ ಸಮೀಕ್ಷಣಾ ಘಟಕದ ಅಧಿಕಾರಿಗಳು ಇದ್ದರು. ಕಾರ್ಯಕ್ರಮವನ್ನು ಎಂ.ಎಸ್. ರಬ್ಬನಗೌಡ್ರ ನಿರೂಪಿಸಿ ವಂದಿಸಿದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಠೋಡ್ ಮಾತನಾಡಿ, ಚಟುವಟಿಕೆಗೆ ಹೃದಯವನ್ನು ಬಳಸಿ ಎಂಬ ಘೋಷವಾಕ್ಯದೊಂದಿಗೆ ಈ ವರ್ಷದ ಹೃದಯ ದಿನವನ್ನು ಆಚರಿಸುತ್ತಿದ್ದೇವೆ. ಹೃದಯವನ್ನು ಆರೋಗ್ಯವಾಗಿಡಲು ಬೆಳಗಿನ ಅಥವಾ ಸಂಜೆಯ ನಡಿಗೆ ಸಹಾಯಕಾರಿ ಎಂದು ಅಭಿಪ್ರಾಯಪಟ್ಟರು.