ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಇಂದಿನಿಂದ ಆರಂಭಗೊಂಡು ಮುಂದಿನ ಹತ್ತು ದಿನಗಳ ಕಾಲ ನಡೆಯಲಿದೆ. ಚಾಮುಂಡಿಬೆಟ್ಟ ಹಾಗೂ ಮೈಸೂರು ಮಧುವಣಗಿತ್ತಿಯಂತೆ ಸಿದ್ಧವಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾಗೆ ಇವತ್ತು ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಚಾಲನೆ ನೀಡಿದರು.
ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ನೀಡಿದರು. ದೇವಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮವನ್ನೂ ಉದ್ಘಾಟಿಸಿದರು.
ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಜೋರಾಗಿದೆ. ಉದ್ಘಾಟನೆಗೆ ಭಕ್ತರಿಗೂ ಅವಕಾಶ ನೀಡಲಾಗಿದೆ. ದಸರಾ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಹದೇವಪ್ಪ ಗಣ್ಯರು ಭಾಗಿಯಾಗಿದ್ದಾರೆ. ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ. ಸಮಾರಂಭಕ್ಕೆ ಜಿಲ್ಲಾಡಳಿತದಿಂದ ವಾಟರ್ ಪ್ರೂಫ್ ಪೆಂಡಾಲ್ ನಿರ್ಮಾಣ ಮಾಡಲಾಗಿದೆ.