ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ನಾಳೆ

0
Nagar Dr. B.R. Bhovi Samaj Talent Award at Ambedkar Bhavan
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಸಮಸ್ತ ಭೋವಿ ಸಮಾಜದ ಕುಲಬಾಂಧವರು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳು ಅಕ್ಟೋಬರ್ 6ರಂದು ಗದಗ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯುವ ಪ್ರತಿಭಾ ಪುರಸ್ಕಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸರಕಾರಿ ನೌಕರರ ಸಂಘದ ಗದಗ ಜಿಲ್ಲಾಧ್ಯಕ್ಷ ಹಾಗೂ ಭೋವಿ ಸಮಾಜದ ಗೌರವಾಧ್ಯಕ್ಷ ರವಿ ಎಲ್.ಗುಂಜೀಕರ ತಿಳಿಸಿದರು.

Advertisement

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭೋವಿ ಸಮಾಜದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಗದಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ಹಮ್ಮಿಕೊಂಡಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಪಿಎಚ್‌ಡಿಯಲ್ಲಿ ಶೇ.85ಕ್ಕಿಂತ ಅಧಿಕ ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಈಗಾಗಲೇ ಸೂಚಿಸಲಾಗಿದೆ. ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಅ.6ರಂದು ನಡೆಯುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ನೇರವಾಗಿ ಬಂದು ತಮ್ಮ ಶಾಲಾ ಅಂಕಪಟ್ಟಿ, ಜಾತಿ ಪ್ರಮಾಣಪತ್ರದ ನಕಲು, 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಒದಗಿಸಿ ಸನ್ಮಾನಿತರಾಗಲು ತಿಳಿಸಿದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು ಮಹಾ ಸಂಸ್ಥಾನಮಠ ಚಿತ್ರದುರ್ಗ ಮತ್ತು ಬಾಗಲಕೋಟ ವಹಿಸುವರು. ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸರ್ಕಾರದ ನಿವೃತ್ತ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಭೋವಿ ವಡ್ಡರ ಸಂಘದ ಅಧ್ಯಕ್ಷ ಎಸ್.ಎಲ್. ಗಂಗಾಧರಪ್ಪ ವಹಿಸುವರು.

ಗದಗ ಜಿಲ್ಲೆ ಭೋವಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ ಗೌರವಿಸುವರು ಎಂದು ಮಾಹಿತಿ ನೀಡಿದರು.

ಪತ್ರಿಕಾ ಗೋಷ್ಠಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಗದಗ ತಾಲೂಕಾ ಅಧಿಕಾರಿ ಹಾಗೂ ಭೋವಿ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ವೆಂಕಪ್ಪ ಬಳ್ಳಾರಿ, ಭೋವಿ ಸಮಾಜದ ಗದಗ ಜಿಲ್ಲಾಧ್ಯಕ್ಷ ಹುಚ್ಚಪ್ಪ ವಾಯ್.ಸಂದಕದ, ಅಸುಂಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಬಸವರಾಜ ಗದಗಿನ, ರಮೇಶ ಮ್ಯಾಗೇರಿ ಸೇರಿದಂತೆ ಸಮಾಜದ ಮುಖಂಡರು, ಯುವಕರು ಇದ್ದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಚೆಕ್ ವಿತರಿಸುವರು. ಜಿಲ್ಲಾ ಮಟ್ಟದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಗೌರವಧನವನ್ನು ಸಂಸದ ಬಸವರಾಜ ಬೊಮ್ಮಾಯಿ ವಿತರಿಸುವರು. ಭೋವಿ ಸಮಾಜದ ಗ್ರಾಮ ಪಂಚಾಯತಿ ಅಧ್ಯಕ್ಷರು/ಉಪಾಧ್ಯಕ್ಷರು/ಸದಸ್ಯರನ್ನು ಕರ್ನಾಟಕ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಸನ್ಮಾನಿಸುವರು. ಗದಗ ಜಿಲ್ಲೆ ಭೋವಿ ಸಮಾಜದ ಪಿ.ಎಚ್.ಡಿ. ಪದವಿ ಪಡೆದವರನ್ನು ನರಗುಂದ ಶಾಸಕ ಸಿ.ಸಿ. ಪಾಟೀಲ ಸನ್ಮಾನಿಸುವರು ಎಂದು ರವಿ ಗುಂಜೀಕರ ಮಾಹಿತಿ ನೀಡಿದರು.

 


Spread the love

LEAVE A REPLY

Please enter your comment!
Please enter your name here