ಹೆಣ್ಣು ಮಕ್ಕಳ ರಕ್ಷಣೆ ಎಲ್ಲರ ಜವಾಬ್ದಾರಿ : ಸಿ.ಎಸ್. ಶಿವನಗೌಡ್ರ

0
One day workshop on 'Beti Bachao Beti Padao'
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಬಾಲ್ಯ ವಿವಾಹ ಮತ್ತು ಹೆಣ್ಣು ಭ್ರೂಣಹತ್ಯೆಗಳನ್ನು ತಡೆಯುವ ಮೂಲಕ ಹೆಣ್ಣು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ತಿಳಿಸಿದರು.

Advertisement

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಈಗಿನ ದಿನಗಳಲ್ಲಿ ಹೆಣ್ಣುಮಕ್ಕಳು ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಹೆಣ್ಣುಮಕ್ಕಳಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳ ಅರಿವು ಮೂಡಿಸುವುದು ಅವಶ್ಯಕವಾಗಿದೆ. ಹೆಣ್ಣು ಭ್ರೂಣಹತ್ಯೆ ತಡೆಗಟ್ಟಿ ಲಿಂಗತಾರತಮ್ಯ ತೊಲಗಿಸುವುದು, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಬಾಲ್ಯ ವಿವಾಹ ಮತ್ತು ಹೆಣ್ಣುಭ್ರೂಣ ಹತ್ಯೆಗಳನ್ನು ತಡೆಗಟ್ಟಲು ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದೆ. ಬಾಲ್ಯ ವಿವಾಹ ಪ್ರಕರಣ ಕಂಡು ಬಂದರೆ ವಿಳಂಬ ಮಾಡದೇ ಸೂಕ್ತ ಕ್ರಮ ಕೈಗೊಳ್ಳಬೇಕು.

ಹೆಣ್ಣು ಮಕ್ಕಳ ದೌರ್ಜನ್ಯ ಹಾಗೂ ಕೌಟುಂಬಿಕ ದೌರ್ಜನ್ಯಗಳ ಕಂಡುಬಂದರೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು. ಆಗ ನೊಂದ ಮಹಿಳೆ ಸರ್ಕಾರದಿಂದ ಪರಿಹಾರ ಕಂಡುಕೊಳ್ಳಬಹುದು ಎಂದರು.

ಮಹಿಳಾ ಮತ್ತು ಮಕ್ಕಳ ಇಲಾಖೆಯ ಶ್ರೀಧರ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಯುನೆಸ್ಕೋ ಸಂಸ್ಥೆಯ ಹರೀಶ ಜೋಗಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟಲು ಇಲಾಖೆಯ ಅಧಿಕಾರಿಗಳು ತೀವ್ರಗತಿಯಲ್ಲಿ ಕೆಲಸ ಮಾಡಬೇಕು. ಬಾಲ್ಯವಿವಾಹದಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕೆಂದು ವಿವರಿಸಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ವಕೀಲರಾದ ಜೆ.ಸಿ. ರೇಶ್ಮೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಡಿವೈಎಸ್‌ಪಿ ಇನಾಮದಾರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫೀಕಾ ಹಳ್ಳೂರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಶ್ರೀಮತಿ ಪತ್ತಾರ ಪ್ರಾರ್ಥಿಸಿದರು. ಜಿಲ್ಲಾ ನಿರೂಪಣಾಧಿಕಾರಿ ರಾಧಾ ಜಿ.ಮಣ್ಣೂರ ಸ್ವಾಗತಿಸಿದರು. ಸುನಿತಾ ನಾಡಿಗೇರ ಕಾರ್ಯಕ್ರಮ ನಿರೂಪಿಸಿದರು.

ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಯಶಸ್ಸಿಗೆ ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದೆ. ಭ್ರೂಣಹತ್ಯೆ ತಡೆಗಟ್ಟಿ ಹೆಣ್ಣು ಮಗುವನ್ನು ಬಾಲ್ಯವಿವಾಹದಿಂದ ರಕ್ಷಿಸುವುದು ಆದ್ಯ ಕರ್ತವ್ಯವಾಗಿದೆ. ದೇಶದ ಅಭಿವೃದ್ಧಿಗೆ ಹೆಣ್ಣು ಮಕ್ಕಳು ಹಾಗೂ ಪುರುಷರು ಒಂದು ಪಕ್ಷಿಯ ಎರಡು ರೆಕ್ಕೆಗಳಿದ್ದಂತೆ. ಹೆಣ್ಣು ಮಕ್ಕಳಿಗೂ ಸಮಾನ ಅವಕಾಶ ನೀಡಿದಾಗ ಅಂತಹ ದೇಶ ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತದೆ ಎಂದರು.

ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಪ್ರಾಸ್ತಾವಿಕವಾಗಿ ಮಾತನಾಡಿ, ಲಿಂಗತಾರತಮ್ಯ ಹೋಗಲಾಡಿಸಲು ಬೇಟಿ ಬಚಾವೋ ಬೇಟಿ ಪಡಾವೊ ಯೋಜನೆ ಜಾರಿ ಮಾಡಲಾಯಿತು. ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಕುರಿತು ಅರಿವು ಮೂಡಿಸುವ ಕೆಲಸವನ್ನು ಅಂಗನವಾಡಿಗಳಲ್ಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here