ಬೆಂಗಳೂರು: ನಾವು ರಾಜ್ಯಕ್ಕೆ ನ್ಯಾಯಯುತವಾಗಿ ತೆರಿಗೆ ಪಾಲು ಕೊಡಿ ಎಂದು ಕೇಳುತ್ತಿದ್ದೇವೆ ಎಂದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆಗುತ್ತಿದೆ. ಆದರೂ ನಾವು ಶಾಲಾ ಕಾಲೇಜು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ.
ವಾರಕ್ಕೆ 6 ದಿನ ವಿದ್ಯಾರ್ಥಿಗಳಿಗೆ ಮೊಟ್ಟೆ ಕೊಡುವ ಕೆಲಸ ಮಾಡುತ್ತಿದ್ದೇವೆ. ಪ್ರತಿ ದಿನ 57 ಲಕ್ಷ ಮಕ್ಕಳಿಗೆ ಮೊಟ್ಟೆ ನೀಡುತ್ತಿದ್ದೇವೆ ಎಂದರು. ಸಾಯಿ ಅನ್ನಪೂರ್ಣ ಟ್ರಸ್ಟ್ ವಾರದಲ್ಲಿ 3ದಿನ ರಾಗಿ ಮಾಲ್ಟ್ ನೀಡುತ್ತಿದೆ. ಅಪೌಷ್ಟಿಕತೆ ದೂರ ಮಾಡಲು ಪೌಷ್ಟಿಕಾಂಶಯುಕ್ತ ಆಹಾರ ನೀಡಲಾಗುತ್ತಿದೆ. ಅಪೌಷ್ಟಿಕತೆ ದೂರ ಮಾಡಲು ಸಾಕಷ್ಟು ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಇನ್ನೂ ನಾವು ರಾಜ್ಯಕ್ಕೆ ನ್ಯಾಯಯುತವಾಗಿ ತೆರಿಗೆ ಪಾಲು ಕೊಡಿ ಎಂದು ಕೇಳುತ್ತಿದ್ದೇವೆ. ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳುವ ಯತ್ನ ಮಾಡಬೇಕಾಗಿದೆ. ರಾಜ್ಯದಿಂದ ಆಯ್ಕೆಯಾದ ಎಂಪಿಗಳು ಲೋಕಸಭೆಯಲ್ಲಿ ಧ್ವನಿ ಎತ್ತಬೇಕಿದೆ. ರಾಜ್ಯಸಭಾ ಸದಸ್ಯರೂ ತೆರಿಗೆ ಪಾಲು ಕೊಡಿ ಎಂದು ಕೇಳಬೇಕು. ಆ ರೀತಿಯ ಶಕ್ತಿ ಬೆಳೆಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.



