ಮೈಸೂರು: ಮುಡಾ ಕೇಸ್ ಸಂಬಂಧ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜು ಸೇರಿದಂತೆ ಹಲವರ ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಎ1 ಆಗಿರುವ ಸಿಎಂ ಸಿದ್ದರಾಮಯ್ಯಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದಾರೆ.
ಬೆಂಗಳೂರಿನಿಂದ ಖಾಸಗಿ ಕಾರಿನಲ್ಲಿ ಮೈಸೂರಿಗೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ ಮೈಸೂರು ಲೋಕಾಯುಕ್ತ ಕಚೇರಿಗೆ ತೆರಳಿದ್ದು ,ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಕೂಡ ವಿಚಾರಣೆ ಆರಂಭಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಎಂ ವಿಚಾರಣೆ ಹಿನ್ನೆಲೆ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಮೈಸೂರು ಸಿಟಿ ಕಮಿಷನರ್ ಸೀಮಾ ಲಾಟ್ಕರ್ ಮಂಗಳವಾರ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿ ನೂರಾರು ಬ್ಯಾರಿಕೇಡ್‌ಗಳನ್ನು ತರಿಸಿಕೊಂಡಿದ್ದಾರೆ.