ಬೆಳಗಾವಿ:- ವೇಶ್ಯಾವಾಟಿಕೆ ನಡೆಸುತ್ತಿದ್ದಾಳೆ ಎಂದು ಆರೋಪಿಸಿ ಮಹಿಳೆ ಮೇಲೆ ನೆರೆಮನೆಯವರು ಹಲ್ಲೆ ನಡೆಸಿರುವ ಘಟನೆ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಜರುಗಿದೆ.
ಬೆಳಗಾವಿಯಲ್ಲಿ ನಡೆದ ಈ ಅಮಾನವೀಯ ಘಟನೆ ಮನುಕುಲವೇ ತಲೆ ತಗ್ಗಿಸುವಂತಿದೆ. ಮಹಿಳೆಯು, ಬೆಳಗಾವಿಯ ವಡ್ಡರವಾಡಿಯ ಮನೆಯೊಂದರಲ್ಲಿ ಬಾಲಕಿಯೊಬ್ಬಳ ಜತೆ ನಾಲ್ಕು ವರ್ಷಗಳಿಂದ ವಾಸವಾಗಿದ್ದಾರೆ. ಅಲ್ಲೇ ಪಕ್ಕದಲ್ಲಿ ವಾಸವಿರುವ ಮತ್ತೊಂದು ಕುಟುಂಬದವರು, ಮಹಿಳೆಯ ವಿರುದ್ಧ ವೇಶ್ಯಾವಾಟಿಕೆಯ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಮನೆಗೆ ನುಗ್ಗಿ ತಾಯಿ, ಮಗಳನ್ನು ಹೊರಗೆ ಎಳೆದು ತಂದು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದಾರೆ.
ಸಂಬಂಧ ಇಲ್ಲದವರೆಲ್ಲಾ ಆ ಮಹಿಳೆಯರ ಮನೆಗೆ ಬಂದು ಹೋಗುತ್ತಾರೆ. ಮಹಿಳೆಯರು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ನೆರೆ ಮನೆಯವರು ತಾಯಿ-ಮಗಳನ್ನ ಮನೆ ಬಿಡಿಸಲು ಜಗಳ ತೆಗೆದಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದ್ದು, ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ ಮಾಡಲಾಗಿದೆ. ಘಟನೆಯ ದೃಶ್ಯ ಮೊಬೈಲ್ ಫೋನ್ನಲ್ಲಿ ರೆಕಾರ್ಡ್ ಆಗಿದೆ.
ಹಲ್ಲೆಗೊಳಗಾದ ಬಳಿಕ ಮಹಿಳೆಯು ದೂರು ನೀಡಲು ಸಮೀಪದ ಮಾಳಮಾರುತಿ ಪೊಲೀಸ್ ಠಾಣೆಗೆ ತೆರಳಿದ್ದರು. ಆದರೆ, 2 ದಿನ ಪೊಲೀಸ್ ಠಾಣೆಗೆ ಅಲೆದರೂ ದೂರು ಸ್ವೀಕರಿಸಲು ನಿರಾಕರಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಮಹಿಳೆ, ‘ಜೀವ ಭಯ ಇದೆ, ರಕ್ಷಣೆ ಕೊಡಿ’ ಎಂದು ಮನವಿ ಬೆಳಗಾವಿ ಕಮಿಷನರ್ಗೆ ದೂರು ನೀಡಿದ್ದರು. ನಂತರ ಇದೀಗ ಕಮಿಷನರ್ ಸೂಚನೆ ಮೇರೆಗೆ ಶುಕ್ರವಾರ ರಾತ್ರಿ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.