ವಿಜಯಸಾಕ್ಷಿ ಸುದ್ದಿ, ಗದಗ: ಮಹಿಳಾ ಮತ್ತು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಇಲಾಖೆಯಿಂದ ಅನುಷ್ಠಾನಗೊಂಡಿರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಒದಗಿಸುವಲ್ಲಿ ಹೆಚ್ಚಿನ ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಹಿಳಾ ಇಲಾಖೆಯ ವಿವಿಧ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹ ನಿಷೇಧ ಹಾಗೂ ಫೋಕ್ಸೋ ಕಾಯ್ದೆಯ ಕುರಿತು ಅರಿವು ಮೂಡಿಸುವ ಕೆಲಸವಾಗಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಮೂಲಭೂತ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ದೌರ್ಜನ್ಯ, ಮಹಿಳೆಯರ ಮತ್ತು ಮಕ್ಕಳ ಸಾಗಾಟ, ಕೌಟುಂಬಿಕ ದೌರ್ಜನ್ಯ ಸೇರಿದಂತೆ ವಿವಿಧ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಪದ್ಮಾವತಿ ಜಿ ಮಾತನಾಡಿ, ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯಡಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ 11, ಅಂಗನವಾಡಿ ಕೇಂದ್ರದಲ್ಲಿ 5, ಜಿಮ್ಸ್ ಆಸ್ಪತ್ರೆ ಹಾಗೂ ಸಂಘ-ಸಂಸ್ಥೆಗಳಲ್ಲಿ 13 ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಹಿಳೆಯರ ಮತ್ತು ಮಕ್ಕಳ ದೌರ್ಜನ್ಯ ತಡೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಸಾಗಾಟ ತಡೆ ಯೋಜನೆಯಡಿ ತಾಲೂಕು ಮಟ್ಟದಲ್ಲಿ 5 ಸಭೆಗಳನ್ನು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ 122 ಸಭೆಗಳನ್ನು ಆಯೋಜಿಸಿ ಅರಿವು ಮೂಡಿಸಲಾಗಿದೆ. ಜುಲೈ 2024ರಿಂದ ಸೆಪ್ಟೆಂಬರ್ ೨೦೨೪ರವರೆಗೆ ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ಒಟ್ಟು 23 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಸಭೆಗೆ ವಿವರಿಸಿದರು.
ಸಭೆಯಲ್ಲಿ ಸ್ವಾಧಾರ ಗೃಹ ಯೋಜನೆ, ಉಜ್ವಲ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ, ಸ್ವೀಕಾರ ಕೇಂದ್ರ, ಬಾಲಕಿಯರ ವಸತಿನಿಲಯ ಯೋಜನೆ, ವಿಧವಾ ಕೋಶ, ಪೋಷಣ ಅಭಿಯಾನ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಮೀನಾಕ್ಷಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ರಾಧಾ ಮಣ್ಣೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.