ಬೆಂಗಳೂರು: ಬಳ್ಳಾರಿಯಲ್ಲಿ ಐವರು ಬಾಣಂತಿಯರು ಮೃತಪಟ್ಟ ಘಟನೆಯನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಬಳ್ಳಾರಿ ಪ್ರಕರಣದಲ್ಲಿ ಯಾರು ತಪ್ಪು ಮಾಡಿದ್ದಾರೆಯೋ ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ. ನನ್ನ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶ ಇಲ್ಲ. ಯಾವುದೇ ಮುಲಾಜಿಲ್ಲದೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯ ನಂತರ ನೀಡಲಾಗಿದ್ದ ಐವಿ ದ್ರಾವಣದಿಂದಾಗಿ ನಾಲ್ವರು ಬಾಣಂತಿಯರು ಕೆಲವು ದಿನಗಳ ಹಿಂದೆ ಮೃತಪಟ್ಟಿದ್ದರು. ಇದೀಗ ಮತ್ತೊಬ್ಬ ಬಾಣಂತಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಬಾಣಂತಿಯರ ಸಾವಿನ ಬಗ್ಗೆ ಮೊದಲು ಪರಿಶೀಲನೆ ನಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.