ಸಂಸದ ಬೊಮ್ಮಾಯಿಯವರಿಂದ ಪಕ್ಷ ವಿರೋಧಿ ಚಟುವಟಿಕೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಶಿಗ್ಗಾಂವಿ ಉಪಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗೆ ಶುಭಾಶಯ ಕೋರಿದ್ದಕ್ಕೆ ನನ್ನನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ. ನನ್ನ ಹಾಗೆ ಸಂಸದ ಬಸವರಾಜ ಬೊಮ್ಮಾಯಿ, ಭರತ್ ಬೊಮ್ಮಾಯಿ ಸಹ ಶುಭಾಶಯ ತಿಳಿಸಿದ್ದಾರೆ. ಅವರನ್ನೇಕೆ ಪಕ್ಷದಿಂದ ಉಚ್ಛಾಟಿಸಿಲ್ಲ ಎಂದು ಧಾರವಾಡ ಕೆಸಿಸಿ ಬ್ಯಾಂಕಿನ ನಿರ್ದೇಶಕ ಸಂಗಮೇಶ ಕಂಬಾಳಿಮಠ ಪ್ರಶ್ನಿಸಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು 2008ರಿಂದಲೂ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆ. ಎಲ್ಲ ಚುನಾವಣೆಗಳಲ್ಲೂ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿಲ್ಲ. ಮೊನ್ನೆ ನಡೆದ ಉಪಚುನಾವಣೆಯಲ್ಲಿ ಭರತ್ ಬೊಮ್ಮಾಯಿ ಸೋಲಿಗೂ ಅವರೇ ಕಾರಣ. ಆದರೂ ಪ್ರಾಮಾಣಿಕ ಕಾರ್ಯಕರ್ತರನ್ನು ಉಚ್ಛಾಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕರ್ತರನ್ನು ಕಡೆಗಣಿಸಿದ್ದೇ ಸೋಲಿಗೆ ಕಾರಣವಾಯಿತು. ಕಾರ್ಯಕರ್ತರನ್ನು ಉಳಿಸಿ, ಪಕ್ಷವನ್ನು ಸಂಘಟಿಸುವ ಕೆಲಸವನ್ನು ಗದಗದಿಂದ ಆರಂಭಿಸಿದ್ದೇನೆ. ಬಸವರಾಜ ಬೊಮ್ಮಾಯಿ ನಡೆಯಿಂದ ಹಾವೇರಿ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿವೆ. ಮುಂದಿನ ದಿನಗಳಲ್ಲಿ ಗದಗ ಜಿಲ್ಲೆಗೂ ಅಂಥದ್ದೇ ಪರಿಸ್ಥಿತಿ ಎದುರಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷರು, ಶಿಸ್ತು ಸಮಿತಿಯ ಪದಾಧಿಕಾರಿಗಳು ಬಸವರಾಜ ಬೊಮ್ಮಾಯಿ ನಿರ್ದೇಶನದಂತೆ ನನ್ನನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ. ಉಚ್ಛಾಟನೆಯ ನಿಯಮಗಳನ್ನು ಪಾಲಿಸುವ ಸೌಜನ್ಯವೂ ಇಲ್ಲದೇ, ಒಬ್ಬ ವ್ಯಕ್ತಿಯ ಪರ ಕೆಲಸ ಮಾಡುತ್ತಿದ್ದಾರೆ. ವ್ಯಕ್ತಿಗಿಂತ ಪಕ್ಷ ದೊಡ್ಡದು ಎನ್ನುವುದನ್ನು ಹಿರಿಯ ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದು ಸಂಗಮೇಶ ಕಂಬಾಳಿಮಠ ಹೇಳಿದರು.


Spread the love

LEAVE A REPLY

Please enter your comment!
Please enter your name here