ಬೆಳಗಾವಿ: ಪ್ರತಿಭಟನೆ ತೀವ್ರ ಸ್ವರೂಪ ಪಡೆಯಲು ಕೆಲವರ ಪ್ರಚೋದನೆಯೇ ಕಾರಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಪಂಚಮಸಾಲಿ 2ಎ ಮೀಸಲಾತಿಗಾಗಿ ಬೆಳಗಾವಿಯ ಸುವರ್ಣಸೌಧದ ಹೊರಗೆ ನಡೆದ ಪ್ರತಿಭಟನೆ ಹಿಂಸಾರೂಪ ತಾಳಿದ್ದಲ್ಲದೆ, ಲಾಠಿ ಚಾರ್ಜ್ ಕೂಡ ನಡೆದಿತ್ತು. ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು,
ಪ್ರತಿಭಟನೆ ತೀವ್ರ ಸ್ವರೂಪ ಪಡೆಯಲು ಕೆಲವರ ಪ್ರಚೋದನೆಯೇ ಕಾರಣ. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ನ್ಯಾಯಾಲಯದ ಆದೇಶದಂತೆ ಕಾನೂನು ಉಲ್ಲಂಘಿಸಿ ಪ್ರತಿಭಟನೆ ಮಾಡುವುದಿಲ್ಲ ಎಂದು ಸ್ವತಃ ಪ್ರತಿಭಟನಾಕಾರರೇ ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದರು. ಆದರೆ, ಪ್ರತಿಭಟನೆಯಲ್ಲಿ ಆಗಿದ್ದೇನು ಎಂದು ಪ್ರಶ್ನಿಸಿದ್ದಾರೆ.
ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು. ಮಾತುಕತೆಗೆ ಮುಖ್ಯಮಂತ್ರಿಗಳು ಸಮಯ ಕೊಟ್ಟಿದ್ದರು. ನಾನೇ ಫೋನ್ ಮಾಡಿದ್ದಲ್ಲದೇ ಸ್ವತಃ ಹೋಗಿ ಕರೆದು ಬಂದಿದ್ದೆ. ಸಮಾಜದ 10 ಜನ ಮುಖಂಡರನ್ನು ಕರೆದುಕೊಂಡು ಬರಲು ಸಿಎಂ ಸೂಚಿಸಿದ್ದರು. ಈ ಸಂಬಂಧ ಸಿ.ಸಿ.ಪಾಟೀಲ್ ಅವರಿಗೆ ನಾನೇ ಫೋನ್ ಮಾಡಿ ಕರೆದೆ. ಅವರು ಯಾರೂ ಬರಲಿಲ್ಲ ಎಂದು ಹೇಳಿದರು.