ವಿಜಯಸಾಕ್ಷಿ ಸುದ್ದಿ, ಗದಗ: ರೋಣ ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಉದ್ಘಾಟನೆಗೊಳ್ಳಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು.
ರೋಣ ತಾಲೂಕಿನ ತಹಸೀಲ್ದಾರ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಶುಕ್ರವಾರ ರೋಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಡಿ.15ರಂದು ನೆರವೇರಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವ್ಯವಸ್ಥಿತವಾಗಿ, ಯಾವುದೇ ಲೋಪಗಳಿಲ್ಲದಂತೆ ಕಾರ್ಯಕ್ರಮವನ್ನು ಆಯೋಜಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯವರು ವಿಶೇಷ ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕು. ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಾರ್ಯವನ್ನು ಹಂಚಿಕೆ ಮಾಡಲಾಗಿದೆ. ಅದರಲ್ಲಿ ಯಾವುದಾದರೂ ತೊಂದರೆ ಇದ್ದರೆ ಅದನ್ನು ಈಗಲೇ ತಿಳಿಸಿ ಪರಿಹಾರ ಕಂಡುಕೊಂಡು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.
ವಿವಿಧ ಇಲಾಖೆಗಳ ಯೋಜನೆಯ ಮಾಹಿತಿ ಒಳಗೊಂಡ ಸ್ಟಾಲ್‌ಗಳನ್ನು ತೆರೆದು ಯೋಜನೆಗಳ ಜಾಗೃತಿ ಪ್ರದರ್ಶಿಸಿ ಸರ್ಕಾರದಿಂದ ನೀಡಿರುವ ಸವಲತ್ತುಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಒದಗಿಸಬೇಕು. ಕಾರ್ಯಕ್ರಮಕ್ಕೆ ಆಗಮಿಸಲು ಪಿಡಬ್ಲೂಯಡಿಯವರು ರಸ್ತೆಗಳನ್ನು ಚೆನ್ನಾಗಿ ನಿರ್ವಹಣೆ ಮಾಡಿದ್ದಾರೆ. ಹಾಗೇ ವೇದಿಕೆ ನಿರ್ವಹಣೆ, ಹೆಲಿಪ್ಯಾಡ್ ನಿರ್ವಹಣೆ, ಅತಿಥಿಗಳನ್ನು ಸ್ವಾಗತಿಸುವ ಕಾರ್ಯ ಸರಿಯಾಗಿ ನಿರ್ವಹಣೆ ಆಗಬೇಕು ಎಂದರು.
ಅಗ್ನಿಶಾಮಕ ದಳವು ಹರ್ಲಾಪುರ ಗ್ರಾಮ, ರೋಣದಲ್ಲಿ ಜರುಗುವ ಕಾರ್ಯಕ್ರಮದ ಹತ್ತಿರ ಅಗ್ನಿಶಾಮಕ ವಾಹನ ಸೇರಿದಂತೆ ಸಂಬಂಧಿಸಿದ ವ್ಯವಸ್ಥೆಯನ್ನು ನೋಡಿಕೊಳ್ಳಬೇಕು. ಪ್ರವಾಸಿ ಮಂದಿರಗಳನ್ನು ಸ್ವಚ್ಛಗೊಳಿಸಿ ಬಂದ ಅತಿಥಿಗಳಿಗೆ ಸೂಕ್ತ ವ್ಯವಸ್ಥೆ ಮಾಡಬೇಕು. ರೋಣ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಬೇಕಾದ ಸಕಲ ಸಿದ್ಧತೆಯನ್ನು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಮಾಡಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, ಕಾರ್ಯಕ್ರಮದ ವಿವಿಧ ಸಮಿತಿಯಲ್ಲಿರುವ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳ ಸಹಕಾರದೊಂದಿಗೆ ತಮ್ಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು. ವಿವಿಧ ಇಲಾಖೆಯ ಯೋಜನೆಯ ಫಲಾನುಭವಿಗಳಿಗೆ ಪ್ರಮಾಣಪತ್ರ ನೀಡುವವರಿಗೆ ಮುಂಚಿತವಾಗಿ ತಿಳಿಸಬೇಕು ಎಂದು ನುಡಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ ಮಾತನಾಡಿ, ಕಾರ್ಯಕ್ರಮದಲ್ಲಿ ಬರುವ ಎಲ್ಲಾ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಮಿಥುನಗೌಡ ಪಾಟೀಲ, ಎಸಿ ಗಂಗಪ್ಪ, ತಹಸೀಲ್ದಾರಾದ ನಾಗರಾಜ ಕೆ, ಎರಿಸ್ವಾಮಿ, ಪುರಸಭೆ ಮುಖ್ಯಧಿಕಾರಿಗಳು, ಅಧಿಕಾರಿಗಳಾದ ಮಹೇಶ ಪೋತದಾರ, ರವಿ ಗುಂಜಿಕರ, ಶರಣು ಗೋಗೇರಿ, ವಾರ್ತಾಧಿಕಾರಿ ವಸಂತ ಮಡ್ಲೂರ, ತಾರಾಮಣಿ, ಕೊಟ್ರೇಶ್ ವಿಭೂತಿ, ರುದ್ರಗೌಡ ಸೇರಿದಂತೆ ಜಿಲ್ಲಾ, ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
**ಬಾಕ್ಸ್**
ವೇದಿಕೆಯಲ್ಲಿ ಎಲ್‌ಇಡಿ ಸ್ಕ್ರೀನ್, ಧ್ವನಿವರ್ಧಕಗಳ ಸ್ಥಿತಿಗತಿಯನ್ನು ಈಗಲೇ ಪರಿಶೀಲಿಸಿಕೊಳ್ಳಬೇಕು ಮತ್ತು ಸಾರ್ವಜನಿಕರಿಗೆ ಗೊಂದಲವಾಗದಂತೆ ಕ್ರಮ ವಹಿಸಬೇಕು. ಕಾರ್ಯಕ್ರಮಕ್ಕೆ ಆಗಮಿಸಿದ ಸಾರ್ವಜನಿಕರಿಗೆ ಉತ್ತಮ ಊಟದ ವ್ಯವಸ್ಥೆ ಆಗಬೇಕು. ಅದರಲ್ಲಿ ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಕೌಂಟರ್‌ಗಳನ್ನು ಮಾಡಿ ಯಾವುದೇ ರೀತಿಯ ಅವ್ಯವಸ್ಥೆ ಆಗದಂತೆ ನೋಡಿಕೊಳ್ಳಬೇಕು. ಅಧಿಕ ಸ್ಥಳಗಳಲ್ಲಿ ಕೈತೊಳೆಯುವ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.