ಮೈಸೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಇಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇದೇ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ನಟ ಪ್ರಕಾಶ್ ರಾಜ್ ಅವರು ಕೊಂಚ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಪ್ರಕಾಶ್ ರಾಜ್ ಅವರು ಶ್ರೀರಂಗಪಟ್ಟಣದಲ್ಲಿ ‘ನಿರ್ದಿಗಂತ’ ರಂಗಶಾಲೆಯನ್ನು ನಡೆಸುತ್ತಿದ್ದಾರೆ.
ರಂಗ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಮಕ್ಕಳ ಕುರಿತಾಗಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಈ ಸಮಯದಲ್ಲಿ ದರ್ಶನ್ ಬಗ್ಗೆ ಪ್ರಶ್ನೆ ಕೇಳಿದ್ದರಿಂದ ಪ್ರಕಾಶ್ ರಾಜ್ ವ್ಯಂಗ್ಯ ಮಾಡಿದರು. ‘ನಾನು ಮಕ್ಕಳ ಬಗ್ಗೆ ಮಾತನಾಡಲು ಬಂದಿದ್ದೇನೆ. ಕಳ್ಳ ನನ್ನ ಮಕ್ಕಳ ಬಗ್ಗೆ ಅಲ್ಲ. ಹಾಗಾಗಿ ಮಕ್ಕಳ ಬಗ್ಗೆ ಮಾತ್ರ ಮಾತನಾಡೋಣ’ ಎಂದು ಪ್ರಕಾಶ್ ರಾಜ್ ಅವರು ಹೇಳಿದ್ದಾರೆ.
ಇನ್ನೂ ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದ. ಆ ಕಾರಣಕ್ಕಾಗಿ ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದುಕೊಂಡು ಬಂದು ಹಲ್ಲೆ ಮಾಡಿ ಸಾಯಿಸಿದ ಆರೋಪ ದರ್ಶನ್, ಪವಿತ್ರಾ ಗೌಡ ಹಾಗೂ ಅವರ ಗ್ಯಾಂಗ್ ಮೇಲಿದೆ.
ಈ ಪ್ರಕರಣದಲ್ಲಿ ಎಲ್ಲ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೆ ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.
ಸದ್ಯಕ್ಕೆ ದರ್ಶನ್ ಅವರು ಬೆನ್ನು ನೋವಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಜಾಮೀನು ಸಿಕ್ಕಿದ್ದಕ್ಕೆ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.