ಮಂಡ್ಯ:- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ದೊರೆತಿದೆ.
ಸಕ್ಕರೆ ನಗರಿ ಮಂಡ್ಯದಲ್ಲಿ ಇಂದು, ನಾಳೆ ಮತ್ತು ನಾಳಿದ್ದು ಮೂರು ದಿನಗಳ ಕಾಲ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಬೆಳಗ್ಗೆ 6.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.
ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರ ಉಪಸ್ಥಿತಿಯಲ್ಲಿ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷರಾದ ಎನ್. ಚಲುವರಾಯಸ್ವಾಮಿ ಅವರು ರಾಷ್ಟ್ರಧ್ವಜಾರೋಹಣ ಮಾಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಗೌರವ ಕಾರ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣವನ್ನು ಹಾಗೂ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕಿ ಮೀರಾ ಶಿವಲಿಂಗಯ್ಯ ಅವರು ನಾಡಧ್ವಜಾರೋಹಣ ಮಾಡಿದರು.
ಶಾಸಕರುಗಳಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ನಾನಾ ಗಣ್ಯರು ಉಪಸ್ಥಿತರಿದ್ದರು.