ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಯುವ ಜನರು ಡ್ರಗ್ಸ್ ಅನ್ನು ಯಥೇಚ್ಛವಾಗಿ ಬಳಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಡ್ರಗ್ಸ್ ಬಳಕೆ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಅವಳಿ ನಗರಗಳು ಡ್ರಗ್ಸ್ ಮುಕ್ತವಾಗಲಿವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಮಂಗಳವಾರ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಾಲಯದ ವತಿಯಿಂದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಪೊಲೀಸರು ಆಯಾ ಜಿಲ್ಲೆಗಳನ್ನು ಡ್ರಗ್ಸ್ ಮುಕ್ತ ಮಾಡುತ್ತೇವೆ ಎಂದಿದ್ದಾರೆ. ಅದೇ ರೀತಿಯಲ್ಲಿ ಹುಬ್ಬಳ್ಳಿ-ಧಾರವಾಡ ನಗರಗಳನ್ನು ಡ್ರಗ್ಸ್ ಮುಕ್ತ ಮಾಡುವಲ್ಲಿ ಪೊಲೀಸ್ ಆಯುಕ್ತರು ಮುಂದಾಗಬೇಕು. ಬೆಂಗಳೂರಿನಲ್ಲಿ ನೈಜೀರಿಯಾ ಮಹಿಳೆಯಿಂದ ರೂ.25 ಕೋಟಿ ಮೌಲ್ಯದ 14 ಕೆ.ಜಿ. ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಕಳೆದ ಎರಡು ವರ್ಷದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯ ಕಂಡಿಲ್ಲ. ಕರಾವಳಿ ಭಾಗದಲ್ಲಿ ಕೋಮಗಲಭೆಯನ್ನು ಹತ್ತಿಕ್ಕಲು ಕೋಮುವಾದಿ ಚಟುವಟಿಕೆ ವಿರೋಧಿ ತಂಡ ರಚನೆ ಮಾಡಲಾಗಿತ್ತು. ಮೂರು ತಿಂಗಳ ಒಳಗಾಗಿ ಕೋಮು ಗಲಭೆಗಳನ್ನು ನಿಯಂತ್ರಣಕ್ಕೆ ತರಲಾಯಿತು. ಪೊಲೀಸರು ಅಸಹಾಯಕರು ಎನ್ನುವ ಸಂದರ್ಭ ಬಂದಿಲ್ಲ ಎಂದು ಅವರು ಹೇಳಿದರು.
ದೇಶದಲ್ಲಿಯೇ ಕರ್ನಾಟಕ ಪೊಲೀಸ್ ಇಲಾಖೆ ನಂಬರ್ ಒನ್ ಸ್ಥಾನದಲ್ಲಿದೆ. ಟೀಕೆ, ಟಿಪ್ಪಣಿಗಳು ಬರುವುದು ಸಹಜ. ಟೀಕೆ, ಟಿಪ್ಪಣಿಗಳ ನಡುವೆ ಪೋಲೀಸ ಇಲಾಖೆ ಕಾರ್ಯ ನಿರ್ವಹಿಸಬೇಕಾಗಿದೆ. ಜನಸ್ಪಂದನೆ ನೀಡುವ ನಿಟ್ಟಿನಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸಬೇಕು. ಶೇ. ೯೫ರಷ್ಟು ಪ್ರಕರಣಗಳನ್ನು 48 ಗಂಟೆಗಳಲ್ಲಿ ಬಗೆಹರಿಸಲಾಗಿದೆ. ಹೊರ ರಾಜ್ಯದಲ್ಲಿರುವ ಅಪರಾಧಿಗಳನ್ನು ಸಹ ಬಂಧಿಸಲಾಗಿದೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದವರನ್ನು ಸಹ ಕೆಲವೇ ಗಂಟೆಗಳಲ್ಲಿ ಬಂಧಿಸಲಾಗುತ್ತಿದೆ ಎಂದರು.
ಶಾಸಕರಾದ ಎನ್.ಎಚ್. ಕೋನರಡ್ಡಿ ಮಾತನಾಡಿ, ಜನರೊಂದಿಗೆ ಉತ್ತಮ ಸಹಕಾರದಿಂದ ಪೊಲೀಸ್ ಇಲಾಖೆ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಸಾರ್ವಜನಿಕರಿಗೆ ತೊಂದರೆ ನೀಡದೆ, ಜನರಿಗೆ ಸ್ಪಂದನೆ ನೀಡುತ್ತಾ ಕಾರ್ಯ ನಿರ್ವಹಣೆ ಮಾಡಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ವಿ.ಪ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಪ್ರದೀಪ ಶೆಟ್ಟರ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿ.ಪಂ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಸ್ವರೂಪ ಟಿ.ಕೆ., ಬೆಳಗಾವಿ ಉತ್ತರ ವಲಯದ ಆರಕ್ಷಕ ಮಹಾ ನಿರೀಕ್ಷಕ ವಿಕಾಸಕುಮಾರ ವಿಕಾಶ, ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ನಾರಾಯಣ ಭರಮನಿ ಮುಂತಾದವರಿದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ್ ಬ್ಯಾಕೋಡ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ಬಯ್ಯ ಪ್ರಸಾದ ಮಾತನಾಡಿ, ಕಾನೂನು ಸುವ್ಯವಸ್ಥೆ ಕಾಪಾಡುವ ಅಧಿಕಾರ ಪೊಲೀಸರಿಗೆ ಇದೆ. ಸರ್ಕಾರಿದಿಂದ ಪೊಲೀಸರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಪೊಲೀಸರು ದಿನದ ೨೪ ಗಂಟೆಗಳ ಕಾಲ ಸೇವೆ ಸಲ್ಲಿಸುತ್ತಾರೆ. 1.10 ಲಕ್ಷ ಪೊಲೀಸ್ ಸಿಬ್ಬಂದಿಗಳಿದ್ದಾರೆ. 2 ಸಾವಿರ ಕೋಟಿ ಅನುದಾನದಲ್ಲಿ 10 ಸಾವಿರ ಮನೆ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದರು.



