ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರು ತಂಡದ ಹಿರಿಯ ಆಟಗಾರರ ನಡೆಯ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿಯಾಗಿದೆ.
ಹೌದು, ಬಾರ್ಡರ್ ಗವಾಸ್ಕರ್ ಸರಣಿಯಲ್ಲಿನ ಕಳಪೆ ಪ್ರದರ್ಶನದ ಬಗ್ಗೆ ಚರ್ಚಿಸಲು ಜನವರಿ 11 ರಂದು ಬಿಸಿಸಿಐ ಪರಿಶೀಲನಾ ಸಭೆ ನಡೆಸಿತ್ತು. ಈ ಸಭೆಯಲ್ಲಿ ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್, ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಮತ್ತು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಭಾಗವಹಿಸಿದ್ದರು.
ಈ ಸಭೆಯಲ್ಲಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ. ಇದೇ ವೇಳೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹಿರಿಯ ಆಟಗಾರರ ನಡೆಯ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾದ ಹಿರಿಯ ಆಟಗಾರರು ಅಭ್ಯಾಸ ವಿಷಯದಲ್ಲಿ ಮತ್ತು ಹೋಟೆಲ್‌ಗೆ ಸಂಬಂಧಿಸಿದಂತೆ ಕೆಲವು ವಿಶೇಷ ಬೇಡಿಕೆಗಳನ್ನು ಮುಂದಿಟ್ಟಿದ್ದರು ಎಂಬ ವಿಚಾರ ಬಹಿರಂಗವಾಗಿದೆ.
ಹೀಗಾಗಿ ಟೀಮ್ ಇಂಡಿಯಾದಲ್ಲಿನ ಸೂಪರ್‌ಸ್ಟಾರ್ ಸಂಸ್ಕೃತಿಯನ್ನು ಕೊನೆಗೊಳಿಸಬೇಕೆಂದು ಗೌತಮ್ ಗಂಭೀರ್ ಆಗ್ರಹಿಸಿದ್ದಾರೆ. ಇದರಿಂದ ಇತರೆ ಆಟಗಾರರಿಗೂ ಸಮಸ್ಯೆಯಾಗುತ್ತಿದೆ ಎಂಬ ಅಭಿಪ್ರಾಯವನ್ನು ಟೀಮ್ ಇಂಡಿಯಾ ಕೋಚ್ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ.