ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ಮತಕ್ಷೇತ್ರದ ಶಹರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ಮೂಲಸೌಲಭ್ಯಗಳನ್ನು ಕಲ್ಪಿಸಲು ಪ್ರಥಮಾದ್ಯತೆ ನೀಡಲಾಗುವುದು. ಇದಕ್ಕೆ ಸಂಬಂಧಿಸಿದ ಇಲಾಖೆಗಳಿಗೆ ಈಗಾಗಲೇ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಹಂತ ಹಂತವಾಗಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಅವರು ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ 2023-24ನೇ ಸಾಲಿನ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಎಸ್‌ಬಿಎಂ ಯೋಜನೆಯಡಿಯಲ್ಲಿ 71.90 ಲಕ್ಷ ರೂ ವೆಚ್ಚದಲ್ಲಿ ಟ್ರೀಟ್‌ಮೆಂಟ್ ಪ್ಲ್ಯಾಂಟ್ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದರು.
ಮತಕ್ಷೇತ್ರದಲ್ಲಿ ಬೆಳ್ಳಟ್ಟಿ ಗ್ರಾಮವು ಇತ್ತೀಚಿನ ದಿನಗಳಲ್ಲಿ ವೇಗವಾಗಿ ಬೆಳೆಯುತ್ತಿದ್ದು, ಇದಕ್ಕೆ ಪೂರಕವಾಗಿ ಗ್ರಾಮ ಪಂಚಾಯಿತಿ ವತಿಯಿಂದಲೂ ಅನೇಕ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಈ ಹಿಂದೆ 3 ಕೋಟಿ ರೂ ವೆಚ್ಚದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕದ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಈ ಕೆಲಸ ಪ್ರಗತಿಯಲ್ಲಿದೆ. ಒಳ್ಳೆಯ ಗುಣಮಟ್ಟದ ಕೆಲಸ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ನಿಯಮಾನುಸಾರ ನಿಗದಿತ ಸಮಯದಲ್ಲಿ ಕೆಲಸ ಪೂರ್ಣಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.
ಗ್ರಾ.ಪಂ ಅಧ್ಯಕ್ಷ ರಮೇಶ ನಿರ್ವಾಣಶೆಟ್ಟರ, ಸದಸ್ಯ ತಿಮ್ಮರಡ್ಡಿ ಮರಡ್ಡಿ, ಶಿವನಗೌಡ ಪಾಟೀಲ ಮಾತನಾಡಿ, ಬೆಳ್ಳಟ್ಟಿ ಗ್ರಾಮಕ್ಕೆ ರಾಜ್ಯ ಹೆದ್ದಾರಿಯಿಂದ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಶಾಸಕ ಡಾ. ಚಂದ್ರು ಲಮಾಣಿ ಹೆದ್ದಾರಿ ಅಧಿಕಾರಿಗಳೊಂದಿಗೆ ಚರ್ಚಿಸಿ ಗುಣಮಟ್ಟದ ರಸ್ತೆಯ ನಿರ್ಮಾಣ ಮಾಡಿಸಿದ್ದಾರೆ. ಇದೀಗ 3 ಕೋಟಿ ರೂ ವೆಚ್ಚದಲ್ಲಿ ಬೂದು ನೀರು ನಿರ್ವಹಣಾ ಘಟಕ ಅವಶ್ಯವಿದ್ದು, ಈ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರ ಗಮನಕ್ಕೂ ತರಲಾಗಿದೆ. ಆದ್ದರಿಂದ ಶಾಸಕ ಡಾ. ಚಂದ್ರು ಲಮಾಣಿ ಅವರು ಸಹ ಸಚಿವರೊಂದಿಗೆ ಚರ್ಚಿಸಿ ಸರಕಾರದ ಗಮನಕ್ಕೆ ತಂದು ಘಟಕ ನಿರ್ಮಾಣಕ್ಕೆ ಮುಂದಾಗಬೇಕೆAದು ಹೇಳಿದರು.
ಮುಂಡರಗಿ ಬಿಜೆಪಿ ಮುಖಂಡ ಹೇಮಗಿರೀಶ ಹಾವಿನಾಳ, ಜಾನು ಲಮಾಣಿ, ಮೋಹನ ಗುತ್ತೆಮ್ಮನವರ, ರಾಘವೇಂದ್ರ ಗುತ್ತೆಮ್ಮನವರ, ಮಲ್ಲಯ್ಯ ಶೀಲವಂತಮಠ, ದ್ಯಾಮಣ್ಣ ಮಾಳಮ್ಮನವರ, ಪ್ರಕಾಶ ಗೋಪಾಳಿ, ಸಂತೋಷ ಮಣ್ಣವಡ್ಡರ, ಆರ್‌ಡಬ್ಲುö್ಯಎಸ್ ಎಇಇ ಮಲ್ಲಿಕಾರ್ಜುನ ಪಾಟೀಲ, ಜೆಇ ಎಂ.ಬಿ. ಹರಕುಣಿ, ಗುತ್ತಿಗೆದಾರ ವೆಂಕಟೇಶ ವಡ್ಡರ ಮುಂತಾದವರು ಉಪಸ್ಥಿತರಿದ್ದರು.
ಗ್ರಾ.ಪಂ ಹೆಸರನ್ನೇ ಮರೆತ ಅಧಿಕಾರಿಗಳು
ಬೆಳ್ಳಟ್ಟಿ ಗ್ರಾಮ ಪಂಚಾಯತಿಯ ಕೇಂದ್ರಸ್ಥಾನದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ವತಿಯಿಂದ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಬ್ಯಾನರ್‌ನಲ್ಲಿ ಗ್ರಾಮ ಪಂಚಾಯಿತಿಯ ಹೆಸರು ಹಾಕದೇ ಇರುವುದಕ್ಕೆ ಅಧ್ಯಕ್ಷ ರಮೇಶ ನಿರ್ವಾಣಶೆಟ್ಟರ ಮತ್ತು ಸದಸ್ಯ ಶಿವನಗೌಡ ಪಾಟೀಲ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಶಾಸಕ ಡಾ. ಚಂದ್ರು ಲಮಾಣಿ ಅವರ ಗಮನಕ್ಕೆ ಈ ವಿಷಯವನ್ನು ಪ್ರಸ್ತಾಪಿಸಿದಾಗ ಅವರು ಕೂಡಾ ಅಧಿಕಾರಿಗಳಿಗೆ ಶಿಷ್ಟಾಚಾರ ಪಾಲಿಸುವಂತೆ ಸೂಚನೆ ನೀಡಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಿದರು.