ಬೆಂಗಳೂರು:- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರವೇ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಶೀಘ್ರದಲ್ಲೇ ಶುರುವಾಗಲಿದೆ. ಚುನಾವಣೆ ಮೂಲಕ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷರ ಆಯ್ಕೆ ಮಾಡುತ್ತೇವೆ. ಬೂತ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನದವರೆಗೂ ಚುನಾವಣೆ ನಡೆಯಲಿದೆ ಎಂದರು.
ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರೂ ಸೇರಿ ಚರ್ಚಿಸಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕರ್ನಾಟಕ ವಿಕಾಸಕ್ಕೆ ಆದ್ಯತೆ ಕೊಡುತ್ತೇವೆ ಎಂದರು.
ಇನ್ನು, ಕರ್ನಾಟಕಕ್ಕೆ ಬರಬೇಕಾದ ಅನುದಾನ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ಬರುತ್ತಿಲ್ಲ ಎಂಬ ರಾಜ್ಯ ಕಾಂಗ್ರೆಸ್ ಮುಖಂಡರ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಬಿಡುಗಡೆ ಮಾಡಿರುವ ಅನುದಾನ ಸದ್ಬಳಕೆಯಾಗಲಿ. ಅವರು ಅನುದಾನ ಕೇಳದಿದ್ದರೂ ನಾವೇ ಘೋಷಣೆ ಮಾಡಿದ್ದೇವೆ. ಬಹಳಷ್ಟು ಅನುದಾನ ಕೊಟ್ಟರೂ ಕರ್ನಾಟಕ ಸರ್ಕಾರ ಬಳಕೆ ಮಾಡಿಲ್ಲ ಎಂದು ವಾಗ್ದಾಳಿ ಮಾಡಿದರು.