ವಹಿಸಿದ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಯ ವ್ಯವಸ್ಥಿತ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯವರು ತಮಗೆ ವಹಿಸಿದ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದೇ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು. ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಾರ್ಯಕ್ರಮದ ಹಿಂದಿನ ದಿನ ಹಾಗೂ ಕಾರ್ಯಕ್ರಮದ ದಿನ ಎರಡು ದಿನಗಳ ಕಾಲ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು. ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿ ಮತ್ತು ಶಾಲಾ ಕಾಲೇಜುಗಳ ಸಿಬ್ಬಂದಿ ತಮ್ಮ ಕಾರ್ಯಾಲಯದ ಧ್ವಜಾರೋಹಣವನ್ನು ಬೆಳಿಗ್ಗೆ 7.30ರೊಳಗೆ ನೆರವೇರಿಸಿ ಬೆಳಿಗ್ಗೆ 8.30ಕ್ಕೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಬೇಕು. ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದ್ದು, ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಹಾಜರಿರಬೇಕು ಎಂದು ಸೂಚಿಸಿದರು.

ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, ಗಣರಾಜ್ಯೋತ್ಸವದ ವ್ಯವಸ್ಥಿತ ಆಚರಣೆಗಾಗಿ ವಿವಿಧ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಹಾಗೂ ಶ್ರದ್ಧೆಯಿಂದ ಕಾರ್ಯನಿರ್ವಹಿಸುವುದು ಮುಖ್ಯವಾಗಿದೆ. ಇಲಾಖಾಧಿಕಾರಿಗಳಿಗೆ ಗಣರಾಜ್ಯೋತ್ಸವದ ಆಚರಣೆ ಕುರಿತಂತೆ ವಹಿಸಲಾಗಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಬೇಕೆಂದರು.

ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ವ್ಯವಸ್ಥೆ, ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ಪರೇಡ್, ಮೂಲಭೂತ ಸೌಕರ್ಯಗಳ ವ್ಯವಸ್ಥೆ ವಿಷಯಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಭೂ ದಾಖಲೆ ಇಲಾಖೆ ಉಪನಿರ್ದೇಶಕ ರುದ್ರಗೌಡ, ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಕುರಿತು ಆದ್ಯತೆ ವಹಿಸಬೇಕು. ಅತಿಥಿಗಳಿಗೆ ಆಸನದ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು. ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.


Spread the love

LEAVE A REPLY

Please enter your comment!
Please enter your name here