ಬೆಳಗಾವಿ:- ಗಾಂಧಿ ಭಾರತ ಸಮಾವೇಶ ಹಿನ್ನೆಲೆ, ನಾಳೆ ಬೆಳಗಾವಿಯಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಮಕ್ಕಳ ಸುರಕ್ಷಾ ದೃಷ್ಟಿಯಿಂದ ನಾಳೆ ಬೆಳಗಾವಿ ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಸುವರ್ಣ ಸೌಧದ ಬಳಿ ಗಾಂಧಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ದೇಶದ ವಿವಿಧ ಗಣ್ಯರು, ಸ್ವಾತಂತ್ರ್ಯ ಹೋರಾಟಗಾರರು, ಸಾರ್ವಜನಿಕರು, ಮಹಿಳೆಯರು ಹಾಗೂ ವೃದ್ಧರು ಸೇರಿ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ.
ಅಲ್ಲದೇ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಂಭವವಿದ್ದು, ಶಾಲಾಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಬೆಳಗಾವಿ ತಾಲೂಕು ಶೈಕ್ಷಣಿಕ ವಲಯದ ಶಾಲೆಗಳಿಗೆ ರಜೆ ಘೋಷಣೆ ಮಾಡುವಂತೆ ಶಿಕ್ಷಣ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿತ್ತು. ಈ ಪ್ರಸ್ತಾವನೆಯನ್ನು ಪರಿಶೀಲನೆ ಮಾಡಿದ ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ರಜೆ ನೀಡಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿದ್ದಾರೆ.